ಕನ್ನಡಪ್ರಭ ವಾರ್ತೆ ಮದ್ದೂರು
ಗೆಜ್ಜಲಗೆರೆ ಗ್ರಾಪಂ ಕಚೇರಿಯಲ್ಲಿದ್ದ ಕಡತಗಳನ್ನು ಪಿಡಿಒ ವೆಂಕಟಯ್ಯ ಹಾಗೂ ಸಿಬ್ಬಂದಿ ರಾತ್ರೋರಾತ್ರಿ ಸಾಗಿಸಿ ನಗರಸಭೆ ವಶಕ್ಕೆ ನೀಡಲು ಮುಂದಾಗಿರುವುದು ಬಗ್ಗೆ ಎಚ್ಚೆತ್ತ ಚಳವಳಿನಿರತರು ಕಡತ ದಾಸ್ತಾನು ಕೊಠಡಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮಗಳನ್ನು ಸೇರ್ಪಡೆ ಮಾಡಿರುವ ಶಾಸಕ ಕೆ.ಎಂ.ಉದಯ್ ಕ್ರಮ ವಿರೋಧಿಸಿ ಗೆಜ್ಜಲಗೆರೆ ಗ್ರಾಮದಲ್ಲಿ ರೈತ ಪರ ಹೋರಾಟಗಾರ್ತಿ ಸುನಂದ ಜಯರಾಂ ನೇತೃತ್ವದಲ್ಲಿ ಜನಪ್ರತಿನಿಧಿಗಳು, ರೈತರು ಹಾಗೂ ಗ್ರಾಮಸ್ಥರು ಕಳೆದ 65 ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ.ಅಧಿಕಾರಿಗಳು ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರ ಪ್ರತಿರೋಧವನು ಲೆಕ್ಕಿಸದೆ ಈಗಾಗಲೇ ಸೋಮನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಮಗಳ ಗ್ರಾಪಂ ಕಚೇರಿಯ ನಾಮಫಲಕಗಳನ್ನು ಮದ್ದೂರು ನಗರಸಭೆ ಕಾರ್ಯಾಲಯ ಎಂದು ಬದಲಾವಣೆ ಮಾಡಿದ್ದಾರೆ. ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮಗಳನ್ನು ನಗರಸಭೆಗೆ ಸೇರ್ಪಡೆ ಮಾಡುವ ಬಗ್ಗೆ ಆಕ್ಷೇಪಣಾ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿರುವ ಕಾರಣ ಈ ಎರಡು ಗ್ರಾಮಗಳ ನಾಮಫಲಕ ಬದಲಾವಣೆಗೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಹೇಳಲಾಗಿದೆ.
ಧರಣಿ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಪರ ಹೋರಾಟಗಾರ್ತಿ ಸುನಂದ ಜಯರಾಂ, ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಸೇರಿದಂತೆ ನಾಲ್ಕು ಗ್ರಾಮಗಳನ್ನು ಸೇರ್ಪಡೆ ವಿರೋಧಿಸಿ ಕಳೆದ 65 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸಹ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ, ಜಿಲ್ಲಾಡಳಿತ ನಮ್ಮ ನಿರಂತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮಗಳನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವುದನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ಅನಾಹುತಗಳಿಗೆ ಜನಪ್ರತಿನಿಧಿಗಳು ಜಿಲ್ಲಾಡಳಿತ ಹೊ ಣಿಯಗಬೇಕಾಗುತ್ತದೆ ಎಂದು ಎಚ್ಚರಿಸಿದರು.