ಬೆಳೆನಷ್ಟದ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ

KannadaprabhaNewsNetwork |  
Published : Sep 03, 2025, 01:00 AM IST
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್‌ ಪ್ರದೇಶ ಅಡಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಅಲ್ಲದೇ ಸಹಸ್ರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್‌ ಪ್ರದೇಶ ಅಡಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಅಲ್ಲದೇ ಸಹಸ್ರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಇಲ್ಲಿನ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬೆಳೆಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವವಿರುವ ಬಗ್ಗೆಯೂ ಮಾಹಿತಿ ಇದೆ. ಈಗಾಗಲೇ ಆಗಿರುವ ಬೆಳೆನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಡಕೆ ಕೊಳೆರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಅಲ್ಲದೇ ಸಂಭಾವ್ಯ ಬೆಳೆಹಾನಿಯನ್ನು ತಡೆಗಟ್ಟಲು ಇರುವ ಕ್ರಮಗಳ ಬಗ್ಗೆಯೂ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.ಬೆಳೆಹಾನಿಗೊಳಗಾಗಿರುವ ರೈತರಿಗೆ ಸಮಾಧಾನ ತರುವ ರೀತಿಯಲ್ಲಿ ಕೇಂದ್ರ ಸರ್ಕಾರವು ಪರಿಹಾರದ ಮೊತ್ತ ಘೋಷಿಸಬೇಕು. ಈಗಾಗಲೇ ಘೋಷಿಸಿರುವ ಮೊತ್ತ ಅತ್ಯಲ್ಪವಾಗಿದೆ. ಪರಿಹಾರಧನ ವಿತರಿಸುವ ವಿಷಯದಲ್ಲಿ ತಾರತಮ್ಯ ಧೋರಣೆ ಸರಿಯಲ್ಲ ಎಂದ ಅವರು, ತೆಂಗು ಅಭಿವೃದ್ಧಿ ಮಂಡಳಿಯ ಶಾಖೆಯನ್ನು ಜಿಲ್ಲೆಯಲ್ಲಿ ಆರಂಭಿಸುವ ಬಗ್ಗೆಯೂ ಉದ್ದೇಶಿಸಲಾಗಿದೆ ಎಂದರು.ಜಿಲ್ಲೆಯಲ್ಲಿ ಮಳೆಹಾನಿಗೊಳಗಾಗಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ರಸ್ತೆಯನ್ನು ದುರಸ್ತಿಗೊಳಿಸಲು ಉದ್ದೇಶಿಸಲಾಗಿದೆ. ಪ್ರಗತಿಪಥ ಯೋಜನೆಯಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ 50 ಕಿ.ಮೀ. ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸಲು ಸುಮಾರು 50 ಕೋಟಿ ರು.ಗಳ ಅನುದಾನ ಸರ್ಕಾರವು ಬಿಡುಗಡೆ ಮಾಡಲಿದೆ. ಅಲ್ಲದೇ ಜಿಲ್ಲೆಯ ಮಲೆನಾಡು ಪ್ರದೇಶದ ವ್ಯಾಪ್ತಿಗೊಳಪಡುವುದರಿಂದ ಹೆಚ್ಚು ಪ್ರಮಾಣದ ರಸ್ತೆಗಳು ಹಾಳಾಗಿದ್ದು, ದುರಸ್ತಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13000 ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೇ ಶೀಘ್ರದಲ್ಲಿ 18500 ಶಿಕ್ಷಕರ ನೇಮಕಾತಿಗೂ ಕ್ರಮಕೈಗೊಳ್ಳಲಾಗಿದೆ. ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್‌ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಗೆ ಅಡಚಣೆಯಾಗದಂತೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಗೆ ನೆರೆಯ 26 ತಾಲೂಕು ವ್ಯಾಪ್ತಿಯ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿರುವುದನ್ನು ಗಮನಿಸಲಾಗಿದೆ. ಮುಂದಿನ 10 ರಿಂದ 15ದಿನಗಳಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಸೂಪರ್ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಅಲ್ಲದೇ ಕೊರತೆ ಇರುವ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಲಾಗುವುದು ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯೆ ಬಲ್ಕೀಶ್‌ ಭಾನು, ಆರ್.ಪ್ರಸನ್ನಕುಮಾರ್, ಶ್ರೀನಿವಾಸಕರಿಯಣ್ಣ, ಕಲಗೋಡು ರತ್ನಾಕರ, ಕಲೀಂವುಲ್ಲಾ, ದೇವಿಕುಮಾರ್, ರಮೇಶ್, ಶೇಷಾದ್ರಿ, ರಮೇಶ್‌ ಹೆಗ್ಡೆ, ಶರತ್‌ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ