ಅಧಿಕಾರಿಗಳು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ

KannadaprabhaNewsNetwork |  
Published : Jan 05, 2025, 01:32 AM IST
4ಕೆಪಿಎಲ್6:ಕೊಪ್ಪಳ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜರುಗಿದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ  ಪೂರ್ವಸಿದ್ಧತೆ ಸಭೆ ಜರುಗಿತು. | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪೂರ್ವಸಿದ್ಧತೆ ಸಭೆಯಲ್ಲಿ ಸಚಿವ ತಂಗಡಗಿ ಅಧಿಕಾರಿಗಳಿಗೆ ಸಲಹೆ ಸೂಚನೆ ಕೊಟ್ಟರು.

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ಧವಾದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಕುಡಿಯುವ ನೀರು, ವಾಹನ ಪಾರ್ಕಿಂಗ್ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜರುಗಿದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತಾದಿಗಳು ಸೇರುವ ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವ ಜನವರಿ 15ರಂದು ನಡೆಯಲಿದ್ದು, ಜಾತ್ರೆ ವ್ಯವಸ್ಥಿತವಾಗಿ ಜರುಗುವಂತೆ ನೋಡಿಕೊಳ್ಳಬೇಕು. ಮಹಾರಥೋತ್ಸವ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಟ್ರಾಫಿಕ್ ಜಾಮ್ ಆಗದಂತೆ ಎಚ್ಚರ ವಹಿಸಬೇಕು. ವಾಹನಗಳಿಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ರಥೋತ್ಸವ ವೇಳೆ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರವಾಗಿ ನಡೆಯಲಿರುವ ದಾಸೋಹಕ್ಕೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಶುದ್ಧ ಕುಡಿಯುವ ನೀರು ಸರಬರಾಜು ಜೊತೆಗೆ ಸ್ವಚ್ಛತೆ ಕಾಪಾಡಲು ನಗರಸಭೆಯಿಂದ ಕ್ರಮ ಕೈಗೊಳ್ಳಬೇಕು. ಜನರ ಆರೋಗ್ಯದ ಹಿತದೃಷ್ಟಿಯಿಂದ ಆ್ಯಂಬುಲೆನ್ಸ್ ವ್ಯವಸ್ಥೆ ಹಾಗೂ ಆರೋಗ್ಯ ತಂಡ ಕಾರ್ಯನಿರ್ವಹಿಸಬೇಕು. ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ಕಾಯ್ದಿರಿಸಬೇಕು. ಶ್ರೀ ಗವಿಸಿದ್ದೇಶ್ವರ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ರಚಿಸಲ್ಪಟ್ಟ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಇದು ನಮ್ಮೆಲ್ಲರ ಜಾತ್ರೆಯಾಗಿರುವುದರಿಂದ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ವಿಶೇಷವಾಗಿ ಜ. 14, 15 ಮತ್ತು 16 ರಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಈ ಮೂರು ದಿನಗಳ ಕಾಲ ಅಧಿಕಾರಿಗಳು ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಂಸದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡ್ಯೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಗವಿಮಠಕ್ಕೆ ಭೇಟಿ

ಸಭೆಯ ನಂತರ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಜಾತ್ರಾ ವಿಷಯದ ಕುರಿತು ಗವಿಸಿದ್ದೇಶ್ವರ ಶ್ರೀಗಳೊಂದಿಗೆ ಚರ್ಚಿಸಿದರು. ಸಂಸದ ಕೆ.ರಾಜಶೇಖರ ಹಿಟ್ನಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಡಿಸಿ ನಲಿನ್ ಅತುಲ್, ಸಿಇಓ ರಾಹುಲ್ ರತ್ನಂ ಪಾಂಡ್ಯೆ ಹಾಗೂ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ