ಹೊಸಪೇಟೆ: ಸಾರ್ವಜನಿಕ ಸೇವೆ ಒದಗಿಸುವಲ್ಲಿ ಲೋಪ, ವಿಳಂಬವಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಬೇರೆ ಬೇರೆ ಅಹವಾಲುಗಳೊಂದಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ.ಟಿ. ಶ್ಯಾಮ್ ಭಟ್ ಹೇಳಿದರು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಕಾಲಕಾಲಕ್ಕೆ ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ, ಮಾನವ ಹಕ್ಕುಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ. ಮುಖ್ಯವಾಗಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಉತ್ತಮ ಸೇವೆಗಾಗಿ ಸೂಕ್ತ ಮಾರ್ಗದರ್ಶನ ಮಾಡಲಾಗುತ್ತಿದೆ. ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡು ವಾಟ್ಸಪ್ ಗ್ರೂಪ್ ರಚಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಮಕ್ಕಳಿಗೆ ಆಹಾರ ಧಾನ್ಯ ಪೂರೈಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಛಾಯಾಚಿತ್ರಗಳ ಮೂಲಕ ಪರೀಕ್ಷಿಸಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಎ.ದಿನೇಶ್ ಸಂಪತ್‌ರಾಜ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ, ಎಡಿಸಿ ಅನುರಾಧ ಜಿ., ಎಎಸ್ಪಿ ಸಲೀಂ ಪಾಷಾ, ನಗರಸಭೆ ಪೌರಾಯುಕ್ತ ಮನೋಹರ, ತಹಸೀಲ್ದಾರ ವಿಶ್ವಜಿತ್ ಮೇಹತಾ ಇದ್ದರು.