ಮುಂಗಾರು ಪೂರ್ವಸಿದ್ಧತೆಗೆ ಅಧಿಕಾರಿಗಳು ಸಜ್ಜಾಗಲಿ

KannadaprabhaNewsNetwork |  
Published : Jun 07, 2026, 02:30 AM IST
ಕಂಪ್ಲಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕುಡಿವ ನೀರು ಹಾಗೂ ಮುಂಗಾರು ಮಳೆ ಪೂರ್ವಸಿದ್ಧತೆ ಸಭೆಯಲ್ಲಿ ತಹಸೀಲ್ದಾರ್ ಜೂಗಲ ಮಂಜುನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು. | Kannada Prabha

ಸಾರಾಂಶ

ತಾಲೂಕಿನಲ್ಲಿ ಕುಡಿವ ನೀರಿನ ಲಭ್ಯತೆ, ಪೂರೈಕೆ, ಸಮಸ್ಯೆಗಳ ಕುರಿತು ತಳಮಟ್ಟದ ಅಧಿಕಾರಿಗಳಿಂದ ಸಮರ್ಪಕ ಮಾಹಿತಿ ದೊರೆಯುತ್ತಿಲ್ಲ.

ಕಂಪ್ಲಿ: ಮುಂಗಾರು ಹಂಗಾಮಿನಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳು, ಕುಡಿವ ನೀರಿನ ಸಮಸ್ಯೆಗಳು, ಸಾರ್ವಜನಿಕರ ಸುರಕ್ಷತೆ ಸಂಬಂಧಿತ ವಿಷಯಗಳಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದೇ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕುಡಿವ ನೀರಿನ ಸ್ಥಿತಿ ಹಾಗೂ ಮುಂಗಾರು ಮಳೆ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿವ ನೀರಿನ ಲಭ್ಯತೆ, ಪೂರೈಕೆ, ಸಮಸ್ಯೆಗಳ ಕುರಿತು ತಳಮಟ್ಟದ ಅಧಿಕಾರಿಗಳಿಂದ ಸಮರ್ಪಕ ಮಾಹಿತಿ ದೊರೆಯುತ್ತಿಲ್ಲ. ಗ್ರಾಮೀಣ, ನಗರ ಪ್ರದೇಶಗಳಲ್ಲಿ ಕುಡಿವ ನೀರಿನ ಕೊರತೆ ಅಥವಾ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ತಕ್ಷಣವೇ ಪರಿಶೀಲಿಸಿ ಶೀಘ್ರ ಪರಿಹಾರ ಒದಗಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಮುಂಗಾರು ಮಳೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ನೀರು ನಿಲ್ಲುವ, ಪ್ರವಾಹದ ಅಪಾಯ ಎದುರಾಗುವ ಹಾಗೂ ಜನವಸತಿ ಪ್ರದೇಶಗಳು ಜಲಾವೃತಗೊಳ್ಳುವ ಸಾಧ್ಯತೆ ಇರುವ ಪ್ರದೇಶಗಳನ್ನು ಗುರುತಿಸಿ ಮುಂಚಿತವಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಪಾಯದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ವ್ಯವಸ್ಥೆ ಮಾಡಬೇಕು. ಶಾಲಾ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಶಿಥಿಲಗೊಂಡ ಅಥವಾ ಅಪಾಯಕಾರಿಯಾಗಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂಡಿಸಬಾರದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಸುರಕ್ಷತೆ ಕುರಿತು ಮಾತನಾಡಿದ ತಹಸೀಲ್ದಾರ್, ಮರಗಳ ಕೊಂಬೆ, ಗಿಡಗಳು ವಿದ್ಯುತ್ ತಂತಿಗಳಿಗೆ ತಾಗಿರುವ ಬಗ್ಗೆ ಮಾಹಿತಿ ದೊರೆತ ಕೂಡಲೇ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಬೇಕು. ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಉರುಳುವುದು, ತಂತಿ ತುಂಡಾಗುವುದು ಅಥವಾ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಜೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಸಮಸ್ಯೆ ಉಂಟಾದ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕುಡಿವ ನೀರಿನ ಪೂರೈಕೆ ವ್ಯವಸ್ಥೆಗೆ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಜೆಸ್ಕಾಂ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಕುಡಿವ ನೀರಿನ ಗುಣಮಟ್ಟದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಲುಷಿತ ನೀರು ಪೂರೈಕೆಯಾಗದಂತೆ ನಿರಂತರ ನಿಗಾ ವಹಿಸಬೇಕು. ನೀರಿನ ಮೂಲಗಳು ಮತ್ತು ಪೂರೈಕೆ ವ್ಯವಸ್ಥೆಗಳ ಶುದ್ಧತೆ ಪರಿಶೀಲಿಸಬೇಕು. ಕುಡಿವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸುವ ಮೂಲಕ ಸಾರ್ವಜನಿಕ ಆರೋಗ್ಯ ಕಾಪಾಡಬೇಕು ಎಂದು ಹೇಳಿದರು.

ಪುರಸಭೆ ವ್ಯಾಪ್ತಿ ಸಂಭವಿಸುವ ಸಮಸ್ಯೆಗಳ ಕುರಿತು ಟಿ.ಸುಧಾಕರ ಅವರ ಮೊಬೈಲ್ 78995 74276 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮಾಲತೇಶ ದೇಶಪಾಂಡೆ 96118 88105ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

30ರಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ
ಏಕರೂಪ ಬೀಜ ದರ ನಿಗದಿಗೆ ಒತ್ತಾಯ