ಪ್ರತಿ ಸೋಮವಾರ ಅಧಿಕಾರಿಗಳು ಜನರ ಕುಂದುಕೊರತೆ ಆಲಿಸಬೇಕು: ಶಾಸಕ ಬಸವರಾಜು

KannadaprabhaNewsNetwork | Published : Jun 25, 2024 12:36 AM

ಸಾರಾಂಶ

ಚನ್ನಗಿರಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರವನ್ನು ಕೊಡಿಸುವ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿ ಗ್ರಾಮಮಟ್ಟದಲ್ಲಿಯೂ ನಡೆಸಲಾಗುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ತಾಲೂಕುಮಟ್ಟದ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರವನ್ನು ಕೊಡಿಸುವ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿ ಗ್ರಾಮಮಟ್ಟದಲ್ಲಿಯೂ ನಡೆಸಲಾಗುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಸೋಮವಾರ ಪಟ್ಟಣದ ವಿಠಲ ರುಕುಮಾಯಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶಾಸಕನಾಗಿ ಅಧಿಕಾರಕ್ಕೆ ಬಂದಾಗಿನಿಂದ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ಕ್ರಮಗಳನ್ನು ಕೈಗೊಂಡಿದ್ದೇನೆ. ಇಂದಿನಿಂದ ಪ್ರತಿ ಸೋಮವಾರ ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ಕಚೇರಿಯಲ್ಲಿದ್ದು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಬೇಕು. ನಾನು ಸಹ ತಾಲೂಕು ಕಚೇರಿಯಲ್ಲಿರುವ ಜನಸಂಪರ್ಕ ಕಚೇರಿಯಲ್ಲಿದ್ದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡುತ್ತೇನೆ ಎಂದರು.

67 ಗ್ರಾಮಗಳಲ್ಲಿ ಜನತಾದರ್ಶನ:

ಸರ್ಕಾರದ ಆದೇಶದಂತೆ ತಾಲೂಕುಮಟ್ಟ, ಜಿಲ್ಲಾಮಟ್ಟದ ಜನತಾದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಆದರೆ, ನಾನು ಕ್ಷೇತ್ರದ ಪ್ರತಿಯೊಬ್ಬರ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಗ್ರಾಮಮಟ್ಟದಲ್ಲಿಯೂ ಜನತಾದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇದುವರೆಗೆ 67 ಗ್ರಾಮಗಳಲ್ಲಿ ಜನತಾದರ್ಶನ ಕಾರ್ಯಕ್ರಮಗಳನ್ನು ನಡೆಸಿದ್ದೇನೆ. ಸಂಬಂಧಿಸಿದ ಗ್ರಾಮಗಳ ಜನರ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿದ್ದೇನೆ ಎಂದರು.

ಕ್ಷೇತ್ರದಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ 77,973, ಅನ್ನಭಾಗ್ಯ ಯೋಜನೆಯಲ್ಲಿ 2,54,941, ಗೃಹಜ್ಯೋತಿ ಯೋಜನೆಯಲ್ಲಿ 84,383 ಫಲಾನುಭವಿಗಳು ಯೋಜನೆ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಇವರೆಲ್ಲರಿಗೂ ಇಲ್ಲಿಯವರೆಗೆ 2,09,72,18,930 ಹಣ ಈ ಯೋಜನೆ ಫಲಾನುಭವಿಗಳಿಗೆ ನೀಡಲಾಗಿದೆ. ಉಚಿತ ಬಸ್ ಪ್ರಯಾಣ, ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿ ಪದವೀಧರರಿಗೆ ಅವರ ಖಾತೆಗೆ ಮೂರು ಸಾವಿರ ಹಣ ಜಮಾ ಮಾಡಲಾಗುತ್ತಿದೆ ಎಂದರು.

ಈ ದಿನ ಸರ್ಕಾರಿ ಜಾಗದಲ್ಲಿ ಮನೆಗಳನ್ನು ನಿರ್ಮಿಸಿಕೊಂಡ 19 ಫಲಾನುಭವಿಗೆ ಹಕ್ಕುಪತ್ರ, ಸಾಮಾಜಿಕ ಭದ್ರತಾ ಯೋಜನೆಯಲ್ಲಿ 21 ಜನರಿಗೆ ಮಂಜೂರಾತಿ ಪತ್ರ, ಸುಕನ್ಯ ಸಮೃದ್ಧಿ ಯೋಜನೆಯ 15 ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕ್ಷೇತ್ರದ 15 ಸರ್ಕಾರಿ ಶಾಲೆಗಳಲ್ಲಿ ಅಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿದ್ದು, ಬಡ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. 16,398 ಫಲಾನುಭವಿಗಳಿಗೆ ಬರ ಪರಿಹಾರವಾಗಿ ₹12.64 ಕೋಟಿ ಪರಿಹಾರದ ಹಣ ರೈತರ ಖಾತೆಗೆ ಈಗಾಗಲೇ ಜಮಾ ಮಾಡಲಾಗಿದೆ. ವಂದನಾ ಯೋಜನೆಯಲ್ಲಿ 1024 ಫಲಾನುಭವಿಗಳಿಗೆ ₹5 ಸಾವಿರ ಪ್ರೋತ್ಸಾಹಧನ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಗಳನ್ನು ಎದುರಿಸುತ್ತಿದ್ದ 12 ಗ್ರಾಮಗಳಲ್ಲಿ ಕೊಳವೆಬಾವಿಗಳನ್ನು ಕೊರೆಸಿ ನೀರನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಮುಖ್ಯ ಮಂತ್ರಿ ಅಮೃತ ಯೋಜನೆಯಲ್ಲಿ ₹696 ಲಕ್ಷ ಹಣ ಬಂದಿದೆ. ಹಣದಲ್ಲಿ ಪಟ್ಟಣದ ಎಲ್ಲ 23 ವಾರ್ಡ್‌ಗಳಲ್ಲಿಯೂ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸಲಾಗುವುದು. ಸ್ವಂತ ನಿವೇಶಗಳು ಹೊಂದಿದ ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಳ್ಳಲು ₹2.69 ಲಕ್ಷ ನೀಡಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಎರ್ರಿಸ್ವಾಮಿ ಮಾತನಾಡಿ, ಸರ್ಕಾರದ ಮಹತ್ವಪೂರ್ಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಶ್ರಯ ಯೋಜನೆಯಲ್ಲಿ ಮನೆಗಳಿಲ್ಲದ ಫಲಾನುಭವಿಗಳಿಗೆ ನಿವೇಶನಗಳನ್ನು ವಿತರಣೆ ಮಾಡಲು ತಾಲೂಕಿನ 15 ಗ್ರಾಮಗಳಲ್ಲಿ ಸರ್ಕಾರಿ ಜಾಗಗಳನ್ನು ಗುರುತಿಸಿದ್ದು, ಫಲಾನುಭವಿಗಳ ಆಯ್ಕೆಯ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಇಒ ಬಿ.ಕೆ.ಉತ್ತಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಡಿವೈಎಸ್ಪಿ ರುದ್ರಪ್ಪ ಎಸ್. ಮುನೇನಕೊಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ, ಮೀನುಗಾರಿಕಾ ಇಲಾಖೆ ಸಹಾಯಕ ನಿದೇರ್ಶಕಿ ದೀಪಾಶ್ರೀ ಶಶೀಂಧ್ರ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಅಶೋಕ್, ಪುರಸಭೆಯ ಸದಸ್ಯರಾದ ಜಿ.ನಿಂಗಪ್ಪ, ಸೈಯದ್ ಗೌಸ್ ಪೀರ್, ಪಾರಿ ಪರಮೇಶ್, ಗಾದ್ರಿ ಬಸವರಾಜ್, ಪಟ್ಲಿ ನಾಗರಾಜ್, ಸೈಯದ್ ಇಮ್ರಾನ್, ಅಮೀರ್ ಅಹ್ಮದ್, ತಾಲೂಕುಮಟ್ಟದ ಅಧಿಕಾರಿಗಳು ಹಾಜರಿದ್ದರು.

- - - -24ಕೆಸಿಎನ್‌ಜಿ2:

ಚನ್ನಗಿರಿ ಪಟ್ಟಣದ ವಿಠಲ ರುಕುಮಾಯಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜು ವಿ, ಶಿವಗಂಗಾ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿದರು.

Share this article