ಕನ್ನಡಪ್ರಭ ವಾರ್ತೆ ಮೈಸೂರು
ಈ ವೇಳೆ ಮಾತನಾಡಿದ ಸಚಿವರು, ಅವಧಿಗೂ ಮುನ್ನ ಜಿಲ್ಲೆಯಾದ್ಯಂತ ಮುಂಗಾರು ಮಳೆಯಾಗುತ್ತಿದ್ದು, ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಳೆಯಿಂದ ಹಾನಿ ಉಂಟಾದರೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದ ಅವರು, ಮಳೆಯಿಂದಾಗಿ ನಂಜನಗೂಡು ತಾಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು ಎಂದರು.ಅಧಿಕ ಮಳೆಯಾದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಹಾಗೂ ಕೊಳವೇಬಾವಿಗಳಿಗೆ ಮಳೆ ನೀರು ಹರಿಯುವುದನ್ನು ತಡೆಗಟ್ಟಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಕಲುಷಿತವಾಗಬಾರದು ಎಂದು ನಿರ್ದೇಶನ ನೀಡಿದರು.
ಪೊಟಾಸಿಯಂ ಬಳಕೆ ಹೆಚ್ಚಾದಷ್ಟು ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತದೆ. ಇದನ್ನು ಕಡಿಮೆ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.
ವಾಜಮಂಗಲ, ಸಿಂಧೂವಳ್ಳಿ ಹಾಗೂ ಹುಲ್ಲಹಳ್ಳಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದಂತಹ ಅಹಿತರ ಘಟನೆಗಳು ಸಂಭವಿಸಬಾರದು. ಈ ಸಂಬಂಧ ಪೊಲೀಸ್ ಇಲಾಖೆಯು ಕಟ್ಟೆಚ್ಚರವಹಿಸಬೇಕು. ಬಾಬಾಸಾಹೇಬರು ಅವರಂತಹ ಮಹನೀಯರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವಂತೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.ಯಾರಿಂದಲೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕ್ರಮವಹಿಸಬೇಕು. ಹೋರಾಟ, ಪ್ರತಿಭಟನೆಗಳು ಕಾನೂನಿನ ಪ್ರಕಾರ ಶಾಂತಿಯುತವಾಗಿ ನಡೆಯಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗಬಾರದು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್- 19 ಪ್ರಕರಣಗಳ ದಾಖಲಾಗುತ್ತಿವೆ. ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು. ಕೋವಿಡ್ ಲಕ್ಷಣಗಳ ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೂರಬಾರದು. ಸಮಸ್ಯೆ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಬೇಕು. ಜನರ ನಡುವೆ ಇದ್ದುಕೊಂಡು ಸರ್ಕಾರವು ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನಗರ ಪಾಲಿಕೆ ಉಪ ಆಯುಕ್ತ ಸೋಮಶೇಖರ್, ಡಿಸಿಪಿ ಕೆ.ಎಸ್. ಸುಂದರ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಎ.ಎಸ್. ರಂಜಿತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ, ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಸುನೀಲ್ ಮೊದಲಾದವರು ಇದ್ದರು.