ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಿನಿಂದಲೇ ಅಧಿಕಾರಿಗಳು ಕುಡಿಯುವ ನೀರಿಗೆ ಪರಿಹಾರ ಕಾರ್ಯಗಳನ್ನು ಯೋಜಿಸಿ, ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಬೇಕು, ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ 83 ಗ್ರಾಪಂ ವ್ಯಾಪ್ತಿಯ ಸುಮಾರು 236 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರದ ನಿರ್ದೇಶನದಂತೆ ಖಾಸಗಿ ಬೋರ್‌ವೆಲ್ ಹಾಗೂ ಪರ್ಯಾಯ ನೀರಿನ ಮೂಲಗಳ ಬಗ್ಗೆ ಗುರುತಿಸಿ, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 1,056 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 165 ಘಟಕಗಳು ಕೆಟ್ಟಿದ್ದು, ಇವುಗಳನ್ನು ದುರಸ್ತಿಗೊಳಿಸಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್ ಸಭೆಗೆ ಮಾಹಿತಿ ನೀಡಿದರು.
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡುತ್ತಿಲ್ಲ, ಶಾಸಕರಿಗೆ ಯಾವುದೇ ಮಾಹಿತಿ ಕೊಡುತ್ತಿಲ್ಲ, ಹೀಗಾದರೆ ಮುಂಬರುವ ಸಮಸ್ಯೆಗಳನ್ನು ನಾವು ಯಾವ ರೀತಿ ಎದುರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ರಘುಮೂರ್ತಿ ಅವರು ಆರ್‌ಒ ಘಟಕಗಳನ್ನು ಅನುಷ್ಠಾನಗೊಳಿಸಿದ ಬಳಿಕ, ಅವುಗಳನ್ನು ಸಂಬಂಧಿಸಿದ ಗ್ರಾಪಂ ಗಳಿಗೆ ಹಸ್ತಾಂತರ ಮಾಡಬೇಕು, ಆದರೆ ಅಧಿಕಾರಿಗಳು ಈ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.
ಕೋವಿಡ್ ಸಂದರ್ಭದಲ್ಲಿ ಸಿಎಸ್‌ಆರ್ ನಿಧಿಯಲ್ಲಿ 47 ಕೋಟಿ, ಡಿಎಂಎಫ್ ನಿಧಿಯಲ್ಲಿ 14.85 ಕೋಟಿ ಹಾಗೂ ಸರ್ಕಾರದ ಅನುದಾನದಲ್ಲಿ ಖರೀದಿಸಲಾದ ವೈದ್ಯಕೀಯ ಉಪಕರಣ ಹಾಗೂ ಔಷಧಿಗಳ ಖರೀದಿ ಮತ್ತು ಬಳಕೆಯ ಲೆಕ್ಕಪತ್ರಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.