ತೈಲ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Apr 12, 2025, 12:46 AM IST
ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಡೀಸೆಲ್‌, ಪೆಟ್ರೋಲ್‌ ಹಾಗೂ ಗ್ಯಾಸ್‌ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾರಿಗೆ ಹಗ್ಗ ಕಟ್ಟಿ ಮೆರವಣಿಗೆಯಲ್ಲಿ ಸಾಗಿದ ಕೈ ಕಾರ್ಯಕರ್ತರು, ಕೇಂದ್ರದ ಅಣಕು ಶವಯಾತ್ರೆ ನಡೆಸಿ ಆಕ್ರೋಶ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಡೀಸೆಲ್‌, ಪೆಟ್ರೋಲ್‌ ಹಾಗೂ ಗ್ಯಾಸ್‌ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಾ, ಅಣಕು ಶವಯಾತ್ರೆಯೊಂದಿಗೆ ಗ್ಯಾಸ್ ಸಿಲಿಂಡರ್, ಸೌದೆ ಜತೆಗೆ ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಮೆರವಣಿಗೆ ಹೊರಟ ಪ್ರತಿಭಟನಾಕಾರರು ಆಜಾದ್ ಪಾರ್ಕ್‌ ವೃತ್ತದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್‌, ರಾಜ್ಯದಲ್ಲಿ ಬಿಜೆಪಿ ತನ್ನ ಜವಾಬ್ದಾರಿ ಮರೆತಿದೆ. ರಚನಾತ್ಮಕ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರ ಅದಾನಿ, ಅಂಬಾನಿ ರಕ್ಷಣೆಗೆ ಮುಂದಾಗಿದೆ. ಅವರ ಆಸ್ತಿ ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಬದುಕನ್ನು ಹಸನುಗೊಳಿಸಲು ಮುಂದಾಗುತ್ತಿಲ್ಲ, ಸಂವಿಧಾನ ವಿರೋಧಿ ನಿಲುವು ತಾಳುವ ಮೂಲಕ ಸಂವಿಧಾನ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರೈತರ ಆದಾಯ ದ್ವಿಗುಣಗೊಳ್ಳುತ್ತಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚ ತೈಲ ಬೆಲೆ ಇಳಿಕೆ ಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುಮಾಡಿದೆ ಎಂದು ಆರೋಪಿಸಿದರು.ಅಡುಗೆ ಅನಿಲ ಬೆಲೆ ₹400 ಗಳಿಂದ ಒಂದು ಸಾವಿರ ರು.ಗಡಿ ತಲುಪಿದೆ. ಯಾವ ನೈತಿಕತೆ ಆಧಾರದ ಮೇಲೆ ರಾಜ್ಯದಲ್ಲಿ ಬಿಜೆಪಿ ಮುಖಂಡರು ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಯಾತ್ರೆ ಕೈಗೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆಂದು ದೂರಿದರು.ಬಡವರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದಿಸುತ್ತಿಲ್ಲ, ಪಂಚ ಗ್ಯಾರಂಟಿಗಳನ್ನು ಸಹಿಸಿಕೊಳ್ಳಲಾಗದೆ ಬಿಟ್ಟಿ ಭಾಗ್ಯಗಳೆಂದು ಹಿಯಾಳಿಸುತ್ತಿದ್ದಾರೆ. ಕೇಂದ್ರ ಸರ್ಕಾರ, ಇಂಧನ, ಅಡುಗೆ ಅನಿಲ, ಅಡುಗೆ ಎಣ್ಣೆಯ ದರವನ್ನು ಹೆಚ್ಚು ಮಾಡಿದ್ದರೂ ಇದರ ಬಗ್ಗೆ ರಾಜ್ಯ ಬಿಜೆಪಿ ಮುಖಂಡರು ತುಟಿ ಬಿಚ್ಚುತ್ತಿಲ್ಲವೆಂದು ಟೀಕಿಸಿದರು.ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಮುಂದಾಗ ಬೇಕೆಂದ ಅವರು, ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆಗೆ ಬಿಜೆಪಿ ಮುಖಂಡರಿಗೆ ಪಂಥಾಹ್ವಾನ ನೀಡಿದರು.ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಮಾತನಾಡಿ, ಹಲವಾರು ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ಅನುಭವ ಇದೆ. ಡಾ. ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ವಿವಿಧ ಸವಲತ್ತು ನೀಡಿರುವ ಬಗ್ಗೆ ಬಿಜೆಪಿ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳುವುದು ಒಳ್ಳೆಯದು ಎಂದರು.ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಮುಖಂಡರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಅವರು, ಪಂಚ ಗ್ಯಾರಂಟಿಗಳನ್ನು ಬಿಜೆಪಿ ಮತ್ತು ಬಜರಂಗದಳ ಮುಖಂಡರ ಕುಟುಂಬಗಳು ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

ದೇಶಕ್ಕೆ ಮಾದರಿ ಆಡಳಿತ ನೀಡುತ್ತಿರುವ ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿ ಮುಖಂಡರು ನಕಲು ಮಾಡುವ ಮೂಲಕ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿದ್ದಾರೆಂದರು.ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಮಾತನಾಡಿ, ಕೇಂದ್ರ ಸರ್ಕಾರವೇ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳನ್ನು ಹೆಚ್ಚಿಸಿದ್ದು, ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶಯಾತ್ರೆ ಹಮ್ಮಿಕೊಂಡಿರುವುದರಲ್ಲಿ ಅರ್ಥವಿಲ್ಲ. ಕೇಂದ್ರ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ, ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಬಹುಮತ ಬಾರದೆ ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ದೇಶದಲ್ಲಿ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ. ಡಿ.ಎಲ್.ವಿಜಯಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಮಲ್ಲೇಶ್, ಜಯರಾಜ್‌ ನಾಯ್ಡು, ರಮೇಶ್, ಮಹ್ಮದ್‌ ಅಕ್ಬರ್, ಮಲ್ಲೇಶ್, ಲೋಕೇಶ್, ಪ್ರವೀಣ್, ತನೋಜ್‌ ಕುಮಾರ್ ನಾಯ್ಡು, ಲಕ್ಷ್ಮಣ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 11 ಕೆಸಿಕೆಎಂ 2ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''