ಕನ್ನಡಪ್ರಭ ವಾರ್ತೆ ಬೆಂಗಳೂರು
ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಒದಗಿಸುತ್ತಿರುವ ಕಂಪನಿಗಳು ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಬೇಕು ಎಂದು ನಿರ್ದೇಶಿಸಿ ರಾಜ್ಯ ಸರ್ಕಾರವು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಪುರಸ್ಕರಿಸಿದೆ.ಈ ಕುರಿತಂತೆ ರಾಜ್ಯ ಸಾರಿಗೆ ಇಲಾಖೆ 2022ರ ನ.25ರಂದು ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಅಗ್ರಿಗೇಟರ್ ಸಂಸ್ಥೆಗಳಾದ ಎಎನ್‌ಐ ಟೆಕ್ನಾಲಜೀಸ್ ಪ್ರೈ.ಲಿ. (ಓಲಾ) ಹಾಗೂ ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈ.ಲಿ. ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಆದೇಶಿಸಿದೆ.
ಸಾರಿಗೆ ಇಲಾಖೆ ನಿಗದಿಪಡಿಸಿದ ದರದ ಮೇಲೆ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ ಮತ್ತು ಉಬರ್ ಶೇ. 5ರಷ್ಟು ಸೇವಾ ಶುಲ್ಕ ಸಂಗ್ರಹಿಸಲು ಅರ್ಹರಾಗಿರುತ್ತಾರೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಸ್ತೃತ ಆದೇಶವು ಇನ್ನೂ ಲಭ್ಯವಾಗಿಲ್ಲ.ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್ಟಿ ತೆರಿಗೆಯನ್ನು ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ರಾಜ್ಯ ಸಾರಿಗೆ ಇಲಾಖೆ 2022ರ ನ.25ರಂದು ಅಧಿಸೂಚನೆ ಹೊರಡಿಸಿತ್ತು.
ಈ ಅಧಿಸೂಚನೆ ಪ್ರಶ್ನಿಸಿದ್ದ ಅಗ್ರಿಗೇಟರ್ ಸಂಸ್ಥೆಗಳು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಪ್ರಯಾಣಿಕರಿಂದ ಪಡೆಯುವ ಶುಲ್ಕದ ಶೇ.20ರವರೆಗೆ ಸೇವಾ ಶುಲ್ಕ ಪಡೆಯಲು ಅವಕಾಶವಿದೆ. ಸೇವಾ ಶುಲ್ಕವನ್ನು ಪ್ರಯಾಣ ದರವೆಂದು ಅರ್ಥೈಸಲಾಗುವುದಿಲ್ಲ. ಆದ್ದರಿಂದ, ದರ ನಿಗದಿಪಡಿಸಲು ಅಥವಾ ನಿಯಂತ್ರಿಸಲು ರಾಜ್ಯ ಸಾರಿಗೆ ಇಲಾಖೆ ಸಕ್ಷಮ ಪ್ರಾಧಿಕಾರವಲ್ಲ ಎಂದು ಆಕ್ಷೇಪಿಸಿದ್ದವು. ಜೊತೆಗೆ, ಸಾರಿಗೆ ಇಲಾಖೆಯ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಕೋರಿದ್ದವು.