ಕನ್ನಡಪ್ರಭ ವಾರ್ತೆ ಮಂಗಳೂರು
ಜ.3ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ 6 ಮಂದಿ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ರು. ನಗದು ದರೋಡೆ ಮಾಡಿ ಪರಾರಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸ್ ಅಧೀಕ್ಷಕ ಯತೀಶ್ ಅವರ ಅದೇಶದ ಮೇರೆಗೆ ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿತ್ತು.ಪ್ರಕರಣಕ್ಕೆ ಸಂಬಂದಿಸಿದಂತೆ ಜ.23 ರಂದು ಕೇರಳ ಕೊಲ್ಲಂ ಜಿಲ್ಲೆಯ ತ್ರಿಕ್ಕಡವೂರ್, ಪೆರಿನಾಡ್ ನಿವಾಸಿ ಅನಿಲ್ ಫರ್ನಾಂಡಿಸ್‌ನನ್ನು ಪೊಲೀಸರು ಬ೦ಧಿಸಿದ್ದಾರೆ. ಕೃತ್ಯಕ್ಕೆ ಉಪಯೋಗಿಸಿದ ಎರ್ಟಿಗಾ ಕಾರು, 5,00,000 ರು. ನಗದು ಹಾಗೂ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ 11,00,000 ರು. ಎಂದು ಅಂದಾಜಿಸಲಾಗಿದೆ. ಈ ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇದೆ.ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿದೆ.