ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು, ಆಸ್ಪತ್ರೆ

KannadaprabhaNewsNetwork |  
Published : Oct 05, 2025, 01:02 AM IST
ಬೆಳಗಾವಿಯಲ್ಲಿ ಬಿಮ್ಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು | Kannada Prabha

ಸಾರಾಂಶ

ಬಡವರು, ತಳ ಸಮುದಾಯದ ಜನರಿಗೆ ಹಾಗೂ ಅಸಮಾನತೆ ನಿರ್ಮೂಲನೆ ಮಾಡಲು ಅವಕಾಶ ವಂಚಿತರಿಗೆ ಉತ್ತಮ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಒದಗಿಸುವುದು ಸರ್ಕಾರದ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 22 ಜಿಲ್ಲೆಗಳಲ್ಲಿ ವೈದ್ಯಕೀಯ‌ ಕಾಲೇಜುಗಳನ್ನು ಆರಂಭಿಸಲಾಗಿದೆ. ಉಳಿದ‌ ಕಡೆಗಳಲ್ಲೂ ಶೀಘ್ರ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ನಗರದ ಬಿಮ್ಸ್‌ ಆವರಣದಲ್ಲಿ ಶುಕ್ರವಾರ ಬಿಮ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ, ಗೃಹವೈದ್ಯರ ವಸತಿ ನಿಲಯ ನಿರ್ಮಾಣಕ್ಕೆ ಶಿಲಾನ್ಯಾಸ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ನಗರ ಬಸ್ ನಿಲ್ದಾಣ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಿಎಂ-ಉಷಾ(ಮೇರು) ಕಟ್ಟಡ ಕಾಮಗಾರಿಗಳು ಮತ್ತು ಹೆದ್ದಾರಿಯಿಂದ ವಿಶ್ವವಿದ್ಯಾಲಯದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಕಾರಣಾಂತರಗಳಿಂದ ಕುಂಟುತ್ತ ಸಾಗಿದ್ದ ಬಿಮ್ಸ್ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇದೀಗ ಆರಂಭಿಸಲಾಗಿದೆ. ಹಂತ ಹಂತವಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು. ಕೆಎಲ್ಇ‌ ಸಂಸ್ಥೆಯಿಂದ ವೈದ್ಯರನ್ನು ನಿಯೋಜಿಸಿ ಉಚಿತ ಸೇವೆ ಒದಗಿಸಿರುವುದರಿಂದ ಸರ್ಕಾರದ‌ ವತಿಯಿಂದ ಧನ್ಯವಾದ ತಿಳಿಸಿದರು.

ಬಡವರು, ತಳ ಸಮುದಾಯದ ಜನರಿಗೆ ಹಾಗೂ ಅಸಮಾನತೆ ನಿರ್ಮೂಲನೆ ಮಾಡಲು ಅವಕಾಶ ವಂಚಿತರಿಗೆ ಉತ್ತಮ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಸಮ ಸಮಾಜ ನಿರ್ಮಾಣಕ್ಕಾಗಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧೀಜಿಯವರು ಸಮಾಜದ ಕಟ್ಟಕಡೆಯ ಜನರನ್ನು ಸ್ವಾವಲಂಬಿಯಾಗಿಸಬೇಕು ಎಂಬುದಕ್ಕೆ ಶ್ರಮಿಸಿದವರು. ಅಸಮಾನತೆ ತೊಡೆದು ಹಾಕಲು ಸರ್ಕಾರ ಅನೇಕ‌ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ಬಡವರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಲಕ್ಷಾಂತರ ಜನರಿಗೆ ನೆರವು ನೀಡಲಾಗುತ್ತಿದೆ. ಇಂತಹ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯಿಂದ ಉಚಿತವಾಗಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಬೆಳಗಾವಿ ನಗರಕ್ಕೆ ನೂರು ಎಲೆಕ್ಟ್ರಿಕ್ ಬಸ್:

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರ‌ ಬಸ್ ನಿಲ್ದಾಣ ನಿರ್ಮಿಸಲಾಗಿದೆ. 700 ಬಸ್‌ಗಳು ಜನ ಸೇವೆಗೆ ಅಣಿಯಾಗಿವೆ. ಅಲ್ಲದೇ,

ಶೀಘ್ರದಲ್ಲಿಯೇ 100 ವಿದ್ಯುತ್‌ ಚಾಲಿತ ಬಸ್‌ಗಳನ್ನು ಬೆಳಗಾವಿ ನಗರಕ್ಕೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿಕ್ಷಣವೇ ಶಕ್ತಿ. ಶಿಕ್ಷಣದಿಂದ ಸ್ವತಂತ್ರರಾಗಲು ಸಾಧ್ಯ. ಆದ್ದರಿಂದ ದಲಿತರು, ಹಿಂದುಳಿದವರು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಿಂದ ಅನೇಕ‌ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬಡವರ ಅನುಕೂಲಕ್ಕಾಗಿ ಹಿಂದಿನ ಸರ್ಕಾರದ‌ ಅವಧಿಯಲ್ಲಿ ಅನೇಕ ಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಈ ಬಾರಿ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಸ್ವಾವಲಂಬನೆ ಮತ್ತು ಆರ್ಥಿಕಾಭಿವೃದ್ಧಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಶಕ್ತಿ ಯೋಜನೆಯಡಿ ಇದುವರೆಗೆ 565 ಕೋಟಿ ಮಹಿಳೆಯರು ಶೂನ್ಯ ಮೊತ್ತದ ಟಿಕೆಟ್ ಪಡೆದು ಉಚಿತ ಪ್ರಯಾಣ ಮಾಡಿರುವುದು ದಾಖಲೆಯಾಗಿದೆ. 1.25 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ತಲಾ ಎರಡು ಸಾವಿರ ರು. ನೀಡಲಾಗುತ್ತಿದೆ. ಅಲ್ಲದೇ ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಗಳ ಮೂಲಕ ಜನರ ಬದುಕು ಉತ್ತಮಪಡಿಸಿ ತನ್ಮೂಲಕ ಸಮಾಜದಲ್ಲಿನ ಅಸಮಾನತೆ‌ ತೊಡೆದುಹಾಕಲು ಶ್ರಮಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ:

ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ರಾಜ್ಯದಲ್ಲಿ ಹತ್ತು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಖುಷ್ಕಿ ಬೆಳೆಹಾನಿ ₹8.5 ಸಾವಿರ ಪರಿಹಾರದಂತೆ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿ ₹8.5 ಸಾವಿರ ಸೇರಿಸಿ ಒಟ್ಟು ₹17 ಸಾವಿರ ಪರಿಹಾರ ನೀಡಲಾಗುತ್ತಿದೆ. ನೀರಾವರಿ ಬೆಳೆಹಾನಿಗೆ ₹21,500 ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇನ್ನೂ ಅನೇಕ ಕಡೆ ಮಳೆಯಾಗುತ್ತಿದ್ದು, ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ಬೆಳಗಾವಿಯ ಬಡ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಕ್ಯಾನ್ಸರ್ ಆಸ್ಪತ್ರೆಯನ್ನು ಕೂಡ ಬಿಮ್ಸ್ ಆವರಣದಲ್ಲಿಯೇ ಸ್ಥಾಪಿಸಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ವಾಹನ ದಟ್ಟಣೆ ನಿರ್ವಹಿಸಲು ₹200 ಕೋಟಿ ವೆಚ್ಚದಲ್ಲಿ ಫ್ಲೈ ಓವರ್, ಹುದಲಿಯಲ್ಲಿ ಆರ್‌ಒಬಿ, ನಗರದಲ್ಲಿ ಸುಸಜ್ಜಿತ ಕ್ರೀಡಾಂಗಣ, ₹55 ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಿಸಲಾಗುತ್ತಿದೆ. ಒಟ್ಟಾರೆ ನಮ್ಮ ಸರ್ಕಾರವು ಜನಪರ ಕೆಲಸ ಮಾಡುತ್ತಿದೆ. ಬಡವರಿಗೆ ಕೈಗೆಟಕುವ ದರದಲ್ಲಿ ಉತ್ತಮ ಚಿಕಿತ್ಸೆ ಬಿಮ್ಸ್‌ನಲ್ಲಿ ಲಭಿಸಲಿದೆ. ವೈದ್ಯರು ಮತ್ತು ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಬಡವರಿಗೆ ಉತ್ತಮ ಚಿಕಿತ್ಸೆ ನೀಡಲು ಸ್ಥಾಪಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು. ಸರ್ಕಾರಿ ಸಂಸ್ಥೆಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು. ಬಸ್ ನಿಲ್ದಾಣ, ಆಸ್ಪತ್ರೆ ಸೇರಿದಂತೆ ಎಲ್ಲ ಸರ್ಕಾರಿ ಆಸ್ತಿಗಳ ರಕ್ಷಣೆ ಹಾಗೂ ಸಮರ್ಪಕ‌ ನಿರ್ವಹಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ‌ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ ಮಾತನಾಡಿ, ಅತ್ಯಾಧುನಿಕ ಸೌಲಭ್ಯ ಹೊಂದಿರುವ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಬಡವರ ಕಾಮಧೇನು. ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರು. ಖರ್ಚು ಮಾಡಿ ಚಿಕಿತ್ಸೆ ಪಡೆಯುವುದು ಬಡವರಿಗೆ ಸಾಧ್ಯವಿಲ್ಲ. ಆದ್ದರಿಂದ ಅವರಿಗಾಗಿ ಸೂಪರ್ ಸ್ಪೆಷಾಲಿಟಿ ಸ್ಥಾಪಿಸಲಾಗಿದೆ. ಕೆಎಲ್‌ಇ ಸಂಸ್ಥೆಯು 20 ವೈದ್ಯರನ್ನು ಸರದಿಯಂತೆ ನಿಯೋಜಿಸುವ ಮೂಲಕ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಜತೆಗೆ ಕೈಜೋಡಿಸಿದೆ. ₹50 ಕೋಟಿ ವೆಚ್ಚದಲ್ಲಿ ಬಿಮ್ಸ್ ಆಸ್ಪತ್ರೆ ಆವರಣದಲ್ಲಿಯೇ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಹೇಳಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ‌ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ ಇದುವರೆಗೆ 565 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುತ್ತಾರೆ ಎಂದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಟ್ಟಡ‌ ಕಾಮಗಾರಿ ಮುಕ್ತಾಯದ ಹಂತದಲ್ಲಿವೆ. ಪಿಎಂ-ಉಷಾ(ಮೇರು) ಯೋಜನೆಯಡಿ ಸಂಶೋಧನೆ‌ ಮತ್ತು ಕೌಶಲ್ಯಾಭಿವೃದ್ಧಿಗಾಗಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ₹9 ಕೋಟಿ ವೆಚ್ಚದಲ್ಲಿ ಹೆದ್ದಾರಿಯಿಂದ ರಾಣಿ ಚನ್ನಮ್ಮ ವಿವಿಗೆ ಸಂಪರ್ಕ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ತಾಂತ್ರಿಕ ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಶೀಘ್ರ‌ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಉತ್ತರ ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರತಿದಿನ 2500ಕ್ಕೂ ಅಧಿಕ ಜನರು ಓಪಿಡಿ ವಿಭಾಗದಿಂದ ಚಿಕಿತ್ಸೆ ಪಡೆಯುತ್ತಾರೆ. ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು 20 ವೈದ್ಯರನ್ನು ಬಿಮ್ಸ್‌ಗೆ ಉಚಿತವಾಗಿ ನಿಯೋಜಿಸುವ ಮೂಲಕ ಬಡವರ ಚಿಕಿತ್ಸೆಗಾಗಿ ಸರ್ಕಾರದೊಂದಿಗೆ ಕೈಜೋಡಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಸ್ವಾವಲಂಬಿ ಜೀವನಕ್ಕೆ ನೆರವಾಗುವುದರ‌ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ ಎಂದು ಹೇಳಿದರು.

ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಾಯವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ಭರಮಗೌಡ ಕಾಗೆ, ಶಾಸಕ ಬಾಬಾಸಾಹೇಬ್ ಪಾಟೀಲ, ವಿಧಾನಪರಿಷತ್‌ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಪರಪ್ಪನ ಜೈಲಿನಲ್ಲಿ ರೌಡಿ ಜನ್ಮದಿನಾಚರಣೆ: ವಿಡಿಯೋ ವೈರಲ್
ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕೇಸ್ ದಾಖಲು : ಡಿ.ಕೆ.ಶಿವಕುಮಾರ್‌ ಸೂಚನೆ