ಕನ್ನಡಪ್ರಭ ವಾರ್ತೆ ಮಣಿಪಾಲ
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕುವ ಕಾರ್ಯಗಳನ್ನು ಯಾವುದೇ ಲೋಪದೋಷಗಳಿಲ್ಲದಂತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಹೇಳಿದರು.ಅವರು ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಒಂದು ತಿಂಗಳ ಕಾಲ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರನ್ನು ತೆಗೆದು ಹಾಕುವಂತಹ ಡೇಟಾವನ್ನು ಪರಿಶೀಲಿಸಲು ಮನೆಗಳಿಗೆ ಭೇಟಿ ನೀಡುತ್ತಾರೆ. ಜಿಲ್ಲೆಯಲ್ಲಿ ಹೊರ ಜಿಲ್ಲೆಗಳಿಂದ ಬಂದ ಕಾರ್ಮಿಕರು ನಾಲ್ಕೈದು ವರ್ಷಗಳಿಂದ ಇಲ್ಲೇ ವಾಸವಿದ್ದರೆ ಅವರು ಹೆಸರು ಸೇರ್ಪಡೆ ಮಾಡಬೇಕು ಮತ್ತು ಅವರ ಸ್ವಂತ ಊರಿನಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರು ತೆಗೆದುಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.ಆನ್‌ಲೈನ್ ಮೂಲಕ ಅಥವಾ ನೇರವಾಗಿ ಮತದಾರರ ನೋಂದಣಿ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಅರ್ಜಿಗಳನ್ನು ಸಲ್ಲಿಸಿದಾಗ ಅವುಗಳನ್ನು ವಿಳಂಬವಿಲ್ಲದೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಜಿಲ್ಲೆಯ ಕೆಲವು ಮತಗಟ್ಟೆಗಳಲ್ಲಿ 1500ಕ್ಕೂ ಹೆಚ್ಚಿನ ಮತಗಳಿದ್ದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪನೆಗೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ತಾಲೂಕು ತಹಸೀಲ್ದಾರ್‌ಗಳು, ವಿವಿಧ ಪಕ್ಷಗಳ ಏಜೆಂಟರಾದ ಬಿಜೆಪಿಯ ಚಂದ್ರಶೇಖರ ಪ್ರಭು, ಕಾಂಗ್ರೆಸ್‌ನ ಬಿ.ಕುಶಲ್ ಶೆಟ್ಟಿ, ಜೆಡಿಎಸ್‌ನ ರಾಮರಾವ್, ಸಿಪಿಐನ ಬಾಲಕೃಷ್ಣ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.