ಸಾಧಿಸುವ ಛಲವಿದ್ದರೆ ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ: ಡಾ.ಎನ್. ಮಹೇಶ್ವರಿ

KannadaprabhaNewsNetwork | Published : Dec 22, 2024 1:33 AM

ಸಾರಾಂಶ

ಕ್ರೀಡಾ ಚಟುವಟಿಕೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ. ಯಾವುದಾದರೂ ಕ್ರೀಡೆಯಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಾಗ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಲಭಿಸಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು .

ಕನ್ನಡಪ್ರಭ ವಾರ್ತೆ ಮೈಸೂರು

ಸಾಧಿಸುವ ಹಂಬಲ ಮತ್ತು ಛಲವಿದ್ದರೆ ಮನುಷ್ಯ ಏನನ್ನು ಬೇಕಾದರೂ ಸಾಧಿಸಬಹುದು. ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದು ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಎನ್. ಮಹೇಶ್ವರಿ ತಿಳಿಸಿದರು.

ಜೆ.ಪಿ. ನಗರದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ಶನಿವಾರ ನಡೆದ ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾಭ್ಯಾಸದ ಜೊತೆ ಜೊತೆಯಲ್ಲಿ ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಉಜ್ವಲ ಭವಿಷ್ಯವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಆತನ ಭವ್ಯ ಜೀವನಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಚೆಲ್ಲಿದಾಗ ಆತನು ಸರ್ವಾಂಗೀಣವಾಗಿ ಬೆಳವಣಿಗೆ ಹೊಂದಲು ಸಾಧ್ಯ ಎಂದು ಅವರು ತಿಳಿಸಿದರು.

ಮೊಬೈಲ್‌ಗಳಿಗೆ ದಾಸರಾಗದೆ ಓದಿನತ್ತ ಗಮನ ಹರಿಸಿ. ಓದಿನ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು. ವಿದ್ಯಾರ್ಥಿಗಳು ಪ್ರಕೃತಿ ನೀಡಿರುವ ಜೀವಕ್ಕೆ ಉತ್ತಮ ಸಂಸ್ಕೃತಿಯನ್ನು ನೀಡಿ, ಅದರಿಂದ ಉತ್ತಮ ಫಲವನ್ನು ಪಡೆದು, ಜ್ಞಾನದ ಬೆಳಕಿನಲ್ಲಿ ಸುಸಂಸ್ಕೃತರಾಗಿ ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್ ಮಹಾವಿದ್ಯಾಪೀಠದ ಶಾಲಾ ಶಿಕ್ಷಣ ವಿಭಾಗದ ನಿರ್ದೇಶಕ ಬಿ.ಎ. ರಾಜಶೇಖರ ಮಾತನಾಡಿ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಹಾದಿಯು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಗುರುಗಳನ್ನು ಗೌರವಿಸಬೇಕು. ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ತಾವು ಓದಿದ ಕಾಲೇಜಿಗೂ, ಕಲಿಸಿಕೊಟ್ಟ ಗುರುಗಳಿಗೂ ಕೀರ್ತಿ ತರಬೇಕು. ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರಚೆಲ್ಲಿ ಜೀವನದಲ್ಲಿ ಯಶಸ್ಸನ್ನು ಪಡೆಯಿರಿ ಎಂದು ಹೇಳಿದರು.

ಟೆನಿಸ್ ತರಬೇತುದಾರ ಎಸ್. ರಮೇಶ್ ಮಾತನಾಡಿ, ಕ್ರೀಡಾ ಚಟುವಟಿಕೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ. ಯಾವುದಾದರೂ ಕ್ರೀಡೆಯಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಾಗ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಲಭಿಸಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ನಿರಂಜನ, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಎಸ್. ಶ್ರುತಿ, ಕ್ರೀಡಾ ವೇದಿಕೆ ಸಂಚಾಲಕ ಎಚ್.ಎನ್. ನಾಗರಾಜ, ಉಪನ್ಯಾಸಕಿ ಎಸ್. ಅಮೂಲ್ಯ ಇದ್ದರು. ಎಸ್.ಎಂ. ಚಂದ್ರಶೇಖರ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸೋಮೇಶ ವಂದಿಸಿದರು. ಎನ್. ಶಕುಂತಳಾ ನಿರೂಪಿಸಿದರು.

Share this article