ಕನ್ನಡಪ್ರಭ ವಾರ್ತೆ ಶಿರಾ ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಉಳಿಯುತ್ತದೆ ಎಂದು ಶ್ರೀ ಸಿದ್ದಾರ್ಥ ಗೌತಮ ಗ್ರಾಮಾಂತರ ಪ್ರೌಢ ಶಾಲೆ ಮುಖ್ಯ ಶಿಕ್ಷಕರಾಗಿದ್ದ ಉಮೇಶ್ ಹೇಳಿದರು. ಅವರು ಭಾನುವಾರ ತಾಲೂಕಿನ ಗಿಡಗನಹಳ್ಳಿಯ ಸಮುದಾಯ ಭವನದಲ್ಲಿ ಶ್ರೀ ಸಿದ್ದಾರ್ಥ ಗೌತಮ ಗ್ರಾಮಾಂತರ ಪ್ರೌಢ ಶಾಲೆಯ ೨೦೦೦-೦೧ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಹಾಗೂ ೨೫ನೇ ವರ್ಷದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ ಸ್ವೀಕರಿಸಿ ಮಾತನಾಡಿದರು. ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ. ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮದಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು. ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮಗಳು ಪ್ರಸ್ತುತ ದಿನಮಾನಗಳಲ್ಲಿ ಅಗತ್ಯವಿದೆ. ಆ ಮೂಲಕ ಹಳೆಯ ಮೆಲುಕು ಹಾಕಲು ಸಾಧ್ಯವಾಗುತ್ತದೆ ಎಂದರು.