ಶಿರಸಿ: ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲಿರುವ ಉತ್ತರಕನ್ನಡ ಜಿಲ್ಲೆಯನ್ನು ಪ್ರಸ್ತಾಪಿತ ಮಂಗಳೂರು ಪೀಠಕ್ಕೆ ಸೇರ್ಪಡೆಗೊಳಿಸುವುದನ್ನು ಖಂಡಿಸಿ, ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಶಿರಸಿ ವಕೀಲರ ಸಂಘದ ವತಿಯಿಂದ ಸೆ. 11ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಸತ್ಯಾಪನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಸಿ.ಎಫ್. ಈರೇಶ ತಿಳಿಸಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಬಿಡ್ಕಿಬೈಲ್‌ನಿಂದ ಅಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಳ್ಳಲಿದೆ. ಬಳಿಕ ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲಿರುವ ಉತ್ತರಕನ್ನಡ ಜಿಲ್ಲೆಯನ್ನು ಪ್ರಸ್ತಾಪಿತ ಮಂಗಳೂರು ಪೀಠಕ್ಕೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ನಿರ್ಣಯ ಕೈಗೊಂಡು, ಮುಖ್ಯ ನ್ಯಾಯಮೂರ್ತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದರು.ಅಲ್ಲದೇ ಧಾರವಾಡ ಹೈಕೋರ್ಟ್ ವಕೀಲರ ಸಂಘದ ಬಿ.ಡಿ. ಹಿರೇಮಠ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಧಾರವಾಡ ಪೀಠದ ವ್ಯಾಪ್ತಿಗೆ ಬರುವ 8 ಜಿಲ್ಲೆಗಳ ವಕೀಲರ ಸಂಘಗಳ ಅಧ್ಯಕ್ಷರೂ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಜಿಲ್ಲೆಯ 11 ತಾಲೂಕುಗಳ ವಕೀಲರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಮುಖಂಡರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.ಉತ್ತರಕನ್ನಡ ಜಿಲ್ಲೆಯ ಭಟ್ಕಳ ಹೊರತುಪಡಿಸಿ ಉಳಿದ ಬಹುತೇಕ ತಾಲೂಕುಗಳ ಕಕ್ಷಿದಾರರಿಗೆ ಮಂಗಳೂರು ದೂರವಾಗಲಿದೆ. ಅಪೀಲು, ಪ್ರಕರಣಗಳ ವಿಚಾರಣೆ, ದಾಖಲೆ ಸಲ್ಲಿಕೆ ಸೇರಿದಂತೆ ನ್ಯಾಯಾಲಯದ ಕೆಲಸಗಳಿಗಾಗಿ ಮಂಗಳೂರಿಗೆ ತೆರಳುವುದರಿಂದ ಸಮಯ ಹಾಗೂ ಹಣ ಎರಡೂ ವ್ಯರ್ಥವಾಗಲಿದೆ. ಪ್ರಯಾಣ, ವಸತಿ ಸೇರಿದಂತೆ ಹೆಚ್ಚುವರಿ ವೆಚ್ಚದ ಹೊರೆ ಕಕ್ಷಿದಾರರ ಮೇಲೆ ಬೀಳಲಿದೆ. ಹೀಗಾಗಿ ಜಿಲ್ಲೆಯನ್ನು ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲಿಯೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷ ಡಾ. ವೆಂಕಟೇಶ ನಾಯ್ಕ, ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ, ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ ದುಭಾಶಿ ಮಾತನಾಡಿದರು.ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘದ ಕಾರ್ಯದರ್ಶಿ ರಾಜೀವ ರೇವಣಕರ, ವಕೀಲರಾದ ಸುರೇಶ ದೇಶಭಂಡಾರಿ, ಶ್ರೀಪಾದ ನಾಯ್ಕ, ಜಿ.ವಿ. ಕುಚಿನಾಡು, ವಿನಾಯಕ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.