ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಪ್ರತಿಬಂಧಕ ವಿಧೇಯಕದ ವಿರುದ್ಧ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ, ವಿಧೇಯಕನ್ನು ಜಾರಿಗೊಳಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಹೊರಟಿರುವ ದ್ವೇಷ ಪ್ರತಿಬಂಧಕ ವಿಧೇಯಕವು ಸಂವಿಧಾನ ವಿರೋಧಿಯಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ವಿಧೇಯಕವನ್ನು ಅನುಷ್ಠಾನಗೊಳಿಸಬಾರದು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಆಗ್ರಹಪತ್ರ ನೀಡಿದರು.ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್‌ಗೌಡರು, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ, ವಾಕ್ ಸ್ವಾತಂತ್ರ ದಮನ ಮಾಡುವ ದ್ವೇಷ ಪ್ರತಿಬಂಧಕ ವಿಧೇಯಕದ ವಿರುದ್ಧ ಬಿಜೆಪಿ ಬೆಳಗಾವಿ ಅಧಿವೇಶನದಲ್ಲೇ ವಿರೋಧಿಸಿ ಪ್ರತಿಭಟನೆ ನಡೆಸಿತ್ತು. ಬಿಜೆಪಿಯ ವಿರೋಧದ ನಡುವೆಯೇ ಕಾಂಗ್ರೆಸ್ ಸರ್ಕಾರ ಈ ಬಿಲ್ ಪಾಸ್ ಮಾಡಿದೆ. ಇದರ ಅನುಷ್ಠಾನಕ್ಕೆ ಬಿಜೆಪಿ ಬಿಡುವುದಿಲ್ಲ, ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಡಾ.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಒಂದು ಕಡೆ ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಪ್ರಚಾರ ನಡೆಸುವ ಕಾಂಗ್ರೆಸ್ ನಾಯಕರು ಮತ್ತೊಂದೆಡೆ ವಿಧೇಯಕಗಳನ್ನು ಮಾಡಿ ಜನರ ಸಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಚರ್ಚೆ, ವ್ಯಂಗ್ಯ ಅಥವಾ ಸತ್ಯವನ್ನು ಹೇಳುವುದನ್ನೂ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ ಎಂದು ಸುರೇಶ್‌ಗೌಡರು ಹೇಳಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ದ್ವೇಷ ಪ್ರತಿಬಂಧಕ ವಿಧೇಯಕವು ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಹಾನಿ ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನಿಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಿಗಳಿಗೆ ಜಾಮೀನು ಇಲ್ಲ. ಜನ ಸಾಮಾನ್ಯರನ್ನು ಅಪರಾಧಿಗಳನ್ನಾಗಿ ಮಾಡುವ ಈ ಕೀಳು ಮಟ್ಟದ ಕಾಯ್ದೆ ನಮಗೆ ಬೇಕೆ ಎಂದ ಪ್ರಶ್ನೆ ಮೂಡುತ್ತದೆ ಎಂದರು.ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ತೆಗೆದುಕೊಳ್ಳಬಹುದು. ಇದರಿಂದ ಪ್ರತಿಭಟನೆಗಳು, ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಅಥವಾ ಜನರ ಧ್ವನಿಯನ್ನು ನಾಶ ಮಾಡುವ ಇಂತಹ ಕಾಯಿದೆ ಯಾವುದೇ ಕಾರಣಕ್ಕೂ ಜಾರಿಯಾಗಬಾರದು ಎಂದು ಜ್ಯೋತಿಗಣೇಶ್ ಒತ್ತಾಯಿಸಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನ ತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಎಂದು ಆರೋಪಿಸಿದರು.ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಎಚ್.ಎಂ.ರವೀಶಯ್ಯ, ನಗರ ಅಧ್ಯಕ್ಷ ಧನುಷ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎ.ಎಚ್.ಆಂಜನಪ್ಪ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಮ್ಮ, ಮುಖಂಡರಾದ ಸತ್ಯಮಂಗಲ ಜಗದೀಶ್, ರಾಜಶೇಖರ್, ಜೆ.ಜಗದೀಶ್, ಮರಿತಿಮ್ಮಯ್ಯ ಮೊದಲಾದವರು ಭಾಗವಹಿಸಿದ್ದರು.