ಪರಿಶಿಷ್ಟ ಜಾತಿ, ಪಂಗಡಗಳ ಹಣ ಗ್ಯಾರಂಟಿಗೆ ದುರ್ಬಳಕೆಗೆ ವಿರೋಧ

KannadaprabhaNewsNetwork | Published : Jul 18, 2024 1:32 AM

ಸಾರಾಂಶ

ರಾಜ್ಯ ಸರ್ಕಾರದ ಈ ಕಾನೂನುಬಾಹಿರ ಹಣ ದುರ್ಬಳಕೆ ವಿರುದ್ಧ ಜು. 26ರಂದು ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು. ಸರ್ಕಾರ ಈ ಕೂಡಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಹಣವನ್ನು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಚಳುವಳಿ ಅನಿವಾರ್ಯ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜು. 26 ರಂದು ಬೃಹತ್ ಪ್ರತಿಭಟನೆ ನಡೆಸಲು ಬುಧವಾರ ನಡೆದ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಗೌರವಾಧ್ಯಕ್ಷ ಬೋರಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಸಿ, ಎಸ್ಟಿ ಉಪ ಯೋಜನೆಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವ ಬಗ್ಗೆ ಸಂಘಟನೆಗಳ ಮುಖಂಡರು ತೀವ್ರವಾಗಿ ವಿರೋಧಿಸಿದರು.

ರಾಜ್ಯ ಸರ್ಕಾರದ ಈ ಕಾನೂನುಬಾಹಿರ ಹಣ ದುರ್ಬಳಕೆ ವಿರುದ್ಧ ಜು. 26ರಂದು ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು. ಸರ್ಕಾರ ಈ ಕೂಡಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಹಣವನ್ನು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಚಳುವಳಿ ಅನಿವಾರ್ಯ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ತಾಲೂಕು ಕಚೇರಿ, ಪುರಸಭೆ, ಭೂ ದಾಖಲೆಗಳ ವಿಭಾಗ ಹಾಗೂ ಪೊಲೀಸ್ ಅಧಿಕಾರಿಗಳು ದಲಿತರ ಯಾವುದೇ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲದೇ ಈ ಎಲ್ಲಾ ಅಧಿಕಾರಿಗಳಿಗೆ ಸ್ಥಳೀಯ ರಾಜಕಾರಣಿಗಳು ಬೆಂಬಲ ನೀಡುವ ಮೂಲಕ ದಲಿತರ ಹಕ್ಕುಗಳನ್ನು ದಮನ ಮಾಡಲು ಹೊರಟಿದ್ದಾರೆ ಎಂದು ಮುಖಂಡರು ಗಂಭೀರ ಆರೋಪ ಮಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮಕ್ಕಳ ಎಸ್ಸೆಸ್ಸೆಲ್ಸಿ ತೇರ್ಗಡೆಯ ಪ್ರೋತ್ಸಾಹ ಹಣವನ್ನು ಏಕಾಏಕಿ ನಿಲ್ಲಿಸಿರುವುದಕ್ಕೆ ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿ, ಪ್ರೋತ್ಸಾಹ ಹಣವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಸಭೆಯಲ್ಲಿ ಸಂಘಟನೆ ಅಧ್ಯಕ್ಷ ಶಂಕರ್, ಗೌರವಾಧ್ಯಕ್ಷ ಅಂದಾನಿ ಸೋಮನಹಳ್ಳಿ, ಕಾರ್ಯದರ್ಶಿ ಸುಂದರೇಶ್, ಪದಾಧಿಕಾರಿಗಳಾದ ದೊರೆಸ್ವಾಮಿ, ಬೋರಯ್ಯ, ಕೃಷ್ಣಪ್ಪ, ಅಂಬರೀಶ, ಬಸವರಾಜು, ಶಿವು, ಸಿದ್ದರಾಜು, ರಾಜೇಶ, ಮಾದೇಶ, ರವಿ, ಕರಟಗೆರೆ ಯೋಗೇಶ ಸೇರಿ ದಲಿತ ಮುಖಂಡರು ಭಾಗವಹಿಸಿದ್ದರು.

Share this article