ಗದಗ:ನಟ, ರಾಜಕಾರಣಿ ಕಮಲ್ ಹಾಸನ್ ಅವರ ಹೇಳಿಕೆ ಖಂಡಿಸಿ ನಗರದ ಕೋರ್ಟ್ ಸರ್ಕಲ್‌ನಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಹನುಮಂತ ಎಚ್. ಅಬ್ಬಿಗೇರಿ ಮಾತನಾಡಿ, ಈ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೇ, ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು, ಕಮಲ್ ಹಾಸನ್ ಅವರ ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ, ಅವರ ಹೊಸ ಚಿತ್ರ ಥಗ್ ಲೈಫ್ (Thug Life) ಕರ್ನಾಟಕದಲ್ಲಿ ಬಿಡುಗಡೆಯಾಗ ಬಾರದು. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡಬಾರದೆಂದು ಆಗ್ರಹಿಸಿದರು.ಈ ವೇಳೆ ಕರವೇ ಕಾರ್ಯಕರ್ತರು ಇದ್ದರು.