ಕನ್ನಡಪ್ರಭ ವಾರ್ತೆ ಚನ್ನಗಿರಿ
ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನ-ಮಾನ ದೊರೆತಿದ್ದರೂ ಸಹಾ ಕನ್ನಡ ಭಾಷೆಯ ಮೇಲೆ ಅನ್ಯ ಭಾಷೆಯವರ ದಬ್ಬಾಳಿಕೆ ಮುಂದುವರೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕಾದ ಜವಾಬ್ದಾರಿ ಕನ್ನಡಿಗರ ಮೇಲಿದೆ ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.ಅವರು ಶನಿವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಅನ್ಯ ಭಾಷಿಕರಿಂದ ಕನ್ನಡಿಗರು ಕರ್ನಾಟಕದಲ್ಲಿ ಜೀವಿಸಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ರಾಜ್ಯಾಡಳಿತದ ಬೆಂಗಳೂರಿನಲ್ಲಿ ಹಿಂದಿ ಭಾಷೆಯನ್ನು, ಇಂಗ್ಲಿಷ್ ಭಾಷೆಯನ್ನು ಮಾತನಾಡುವ ಪರ ಭಾಷಿಕರು ನಿರಾಳವಾಗಿ ಜೀವಿಸುತ್ತಿದ್ದಾರೆ. ಕನ್ನಡ ಭಾಷೆಯಲ್ಲಿ ಮಾತನಾಡುವವರು ಬದುಕಲು ಆಗುತ್ತಿಲ್ಲ ಎಂದು ಹೇಳಿದರು.
ರಾಷ್ಟ್ರ ಧ್ವಜಾರೋಹಣವನ್ನು ತಹಸೀಲ್ದಾರ್ ಎನ್.ಜೆ.ನಾಗರಾಜ್ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆಯನ್ನೆ ಕಡ್ಡಾಯವಾಗಿ ಬಳಸಲು ಮತ್ತು ಸರ್ಕಾರಿ ಸಮಾರಂಭಗಳಲ್ಲಿ ಕನ್ನಡದ ಕವಿ ಸಾಹಿತಿಗಳು ಬರೆದಹಂತಹ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲು ಸರ್ಕಾರ ಆದೇಶ ಮಾಡಿರುವುದು ಸರ್ಕಾರಕ್ಕೆ ಕನ್ನಡ ಭಾಷೆಯ ಮೇಲೆ ಇರುವ ಕಾಳಜಿ ತೋರುತ್ತದೆ ಎಂದರು.ಜೀವ ವೈವಿದ್ಯ ನಿಗಮದ ಅಧ್ಯಕ್ಷ ವಡ್ನಾಳ್ ಜಗದೀಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಲ್.ಜಿ.ಮಧುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಡಿವೈಎಸ್ಪಿ ಸ್ಯಾಮ್ ವರ್ಗಿಸ್, ತಾಪಂ ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗಣೇಶ್, ಬಿಸಿಎಂ ಅಧಿಕಾರಿ ರವೀಂದ್ರಕುಮಾರ್ ಅಥರ್ಗ, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಉಪ ತಹಸೀಲ್ದಾರ್ ರುಕ್ಮಿಣಿಬಾಯಿ, ಸಂಪನ್ಮೂಲ ವ್ಯಕ್ತಿ ಎಂ.ಬಿ.ನಾಗರಾಜ್, ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾದ ಸೇವೆ ಸಲ್ಲಿಸಿದವರಿಗೆ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಮನ ಮೋಹಕವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.