ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 05, 2024, 12:34 AM IST
4ಕೆಪಿಎಲ್23 ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆ | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಸೆ. 17ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮತ್ತು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ.

ಸಿದ್ಧತಾ ಸಭೆಯಲ್ಲಿ ನಲಿನ್ ಅತುಲ್ ಸೂಚನೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಸೆ. 17ರ ಕಲ್ಯಾಣ ಕರ್ನಾಟಕ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಸೆ. 17ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮತ್ತು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು ಎರಡೂ ಕಾರ್ಯಕ್ರಮಗಳಿಗೆ ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಪರೇಡ್‌ನಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತಿ ಸಮಯದಲ್ಲಿ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳು ಕ್ರಮ ವಹಿಸಬೇಕು ಎಂದರು.

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಆದ್ಯತೆ ನೀಡಲು ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ-ಕಾಲೇಜುಗಳ ಮಕ್ಕಳಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಬಸ್ ಸೌಲಭ್ಯ ಕಲ್ಪಿಸಿ, ಮಕ್ಕಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಿ, ಮತ್ತೆ ಬಸ್ ಮೂಲಕ ನಿಗದಿತ ಸ್ಥಳಕ್ಕೆ ಬಿಡಲು ಕ್ರಮ ವಹಿಸುವಂತೆ ಕ.ಕ.ರ.ಸಾ. ಸಂಸ್ಥೆಯವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ಕೊಪ್ಪಳ ತಹಸೀಲ್ದಾರ ವಿಠ್ಠಲ ಚೌಗಲಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ