ಕನ್ನಡಪ್ರಭ ವಾರ್ತೆ ಮಡಿಕೇರಿ
ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು, ಈಗ ಹೆಚ್ಚಿನ ಮಳೆ ಆಗಿರುವುದರಿಂದ ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು.
ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‌ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬಂಧ ಹಾಡುಗಳನ್ನು ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.ಸಾಂಸ್ಕೃತಿಕ ಕಾಯಕ್ರಮ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿಯನ್ನು ವೀಕ್ಷಿಸಿ ಸರಿಯಾದದ್ದನ್ನು ಆಯ್ಕೆ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.
25ರೊಳಗೆ ಅಗತ್ಯ ಸಿದ್ಧತೆಗೆ ಸೂಚನೆ: ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಸಾಂಸ್ಕೃತಿಕ, ಉಪಾಹಾರ, ಬಹುಮಾನ, ಸ್ವಚ್ಛತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅಕ್ಟೋಬರ್ 25 ರೊಳಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದರು.ವಿವಿಧ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವಂತಾಗಲು ಅಗತ್ಯ ಕ್ರಮವಹಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ ಜಿಲ್ಲೆಯಲ್ಲಿ ಕನ್ನಡ ಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರಜ್ ಮಾತನಾಡಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಜಿಲ್ಲಾಡಳಿತದ ಜೊತೆ ಸದಾ ಕೈಜೋಡಿಸಲಿದೆ ಎಂದು ಹೇಳಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಧಾಮಪ್ಪ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಎಲ್ಲ ರೀತಿಯ ಪೂರ್ವತಯಾರಿ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್. ಶೆಟ್ಟಿ, ಜಿ.ಪಂ. ಎಂಜಿನಿಯರ್ ಜಿ.ಕೆ. ನಾಯಕ್, ಡಿವೈಎಸ್‌ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಡಾ. ಮಧುಸೂದನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಅನಿತಾ ಭಾಸ್ಕರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ತಹಸೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಪೌರಾಯುಕ್ತರಾದ ಎಚ್.ಆರ್. ರಮೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ, ಸ್ಕೌಟ್ಸ್ ಮತ್ತು ಗೈಡ್ಸ್ ಸಮನ್ವಯಾಧಿಕಾರಿ ದಮಯಂತಿ ಇತರರು ಸಭೆಯಲ್ಲಿ ಹಾಜರಿದ್ದರು.