ಗದಗ: ಲೋಕಸಭಾ ಚುನಾವಣೆ ಸಿದ್ಧತೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರರ ಜತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಶನಿವಾರ ಸಭೆ ನಡೆಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನಡೆಯುವ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದರು.
ಜಿಪಂ ಸಿಇಒ ಎಸ್ ಭರತ್ ಮಾತನಾಡಿ, ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮತದಾನ ಹೆಚ್ಚಳಕ್ಕೆ ಪ್ರೋತ್ಸಾಹಿಸಬೇಕು. ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ತಂಡವಾಗಿ ಕಾರ್ಯ ನಿರ್ವಹಿಸಬೇಕು. ಮಹಿಳೆಯರು ಸೇರಿದಂತೆ ಅರ್ಹರೆಲ್ಲರೂ ಮತದಾನದ ದಿನದಂದು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತಾಗಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ಮಾಡಿದರು.ಏ.22 ರಂದು ಸಂಜೆ 5 ಕ್ಕೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು.ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಲಹೆ ಮಾಡಿದರು.
ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಇತರರು ಇದ್ದರು.