ಧಾರ್ಮಿಕ ಪರಂಪರೆಯ ವೈಭವ ಜಗತ್ತಿಗೆ ಪರಿಚಯಿಸುವ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವನ್ನು ಯಶಸ್ವಿಗೊಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಯುವಕರು ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಪಡೆದು ಸಂಘಟಿತರಾಗಿ ಕೆಲಸ ಮಾಡಿದರೆ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.
ಕಾರ್ಕಳ: ಧಾರ್ಮಿಕ ಪರಂಪರೆಯ ವೈಭವ ಜಗತ್ತಿಗೆ ಪರಿಚಯಿಸುವ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವನ್ನು ಯಶಸ್ವಿಗೊಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಯುವಕರು ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಪಡೆದು ಸಂಘಟಿತರಾಗಿ ಕೆಲಸ ಮಾಡಿದರೆ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ವತಿಯಿಂದ ಕಾರ್ಕಳ ಜೈನ ಮಠದ ಮಹಾಮಸ್ತಕಾಭಿಷೇಕ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾಮಸ್ತಕಾಭಿಷೇಕದಂತಹ ಬೃಹತ್ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಮುಖ್ಯ. ಯುವಕರ ಉತ್ಸಾಹಕ್ಕೆ ಹಿರಿಯರ ಅನುಭವದ ಮಾರ್ಗದರ್ಶನ ದೊರೆತಾಗ ಕಾರ್ಯಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತವೆ. ಈ ಮಹತ್ಕಾರ್ಯಕ್ಕೆ ನಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಸದಾ ಇರಲಿದೆ. ಎಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ಹಂಚಿಕೊಂಡು ಮಹೋತ್ಸವದ ಯಶಸ್ಸಿಗೆ ಶ್ರಮಿಸಬೇಕು ಎಂದರು.ಹೆಗ್ಗಡೆ ನೇತೃತ್ವದಲ್ಲಿ ಯಶಸ್ಸು: ಶ್ರೀ ಕ್ಷೇತ್ರ ಶ್ರವಣಬೆಳಗೊಳ ಮಹಾಸಂಸ್ಥಾನದ ದಿಗಂಬರ ಜೈನ ಮಠದ ಸ್ವಸ್ತಿಶ್ರೀ ಶ್ರೀಮದಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಮಾತನಾಡಿ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಗಳು ಯಶಸ್ಸು ಕಾಣುತ್ತವೆ. ಅವರ ಉಪಸ್ಥಿತಿ ಜೈನ ಸಮುದಾಯ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೆ ಶಕ್ತಿಯಾಗಿದೆ ಎಂದು ಹೇಳಿದರು.ಜೈನ ಧರ್ಮದ ಶ್ರಾವಕ-ಶ್ರಾವಕಿಯರು ಕೇವಲ ಹೆಸರಿನಲ್ಲಿ ಜೈನರಾಗದೆ, ಧರ್ಮದ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅಹಂಕಾರವನ್ನು ತ್ಯಜಿಸಿ ವಿನಯ, ತ್ಯಾಗ ಹಾಗೂ ಧಾರ್ಮಿಕ ಮೌಲ್ಯಗಳಿಗೆ ಆದ್ಯತೆ ನೀಡಬೇಕು ಎಂದರು.ಗಣಾಚಾರ್ಯ 108 ಶ್ರೀ ಪುಷ್ಪದಂತ ಸಾಗರ ಮಹಾರಾಜರ ಪರಮಶಿಷ್ಯರಾದ ಏಲಾಚಾರ್ಯ 108 ಶ್ರೀ ಪ್ರಸಂಗ ಸಾಗರ ಮುನಿಮಹಾರಾಜರು, ಕಾರ್ಕಳ ಶ್ರೀ ಕ್ಷೇತ್ರ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಇದ್ದರು.
ಮಹಾಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಕೋಶಾಧಿಕಾರಿ ಮೋಹನ್ ಪಡಿವಾಳ್, ಕಾರ್ಯದರ್ಶಿ ಸುನೀಲ್ ಕುಮಾರ್ ಬಜಗೋಳಿ, ಹಿರಿಯ ಉಪಾಧ್ಯಕ್ಷ ಅನಂತರಾಜ್ ಪೂವಣಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುನೀಲ್ ಕುಮಾರ್ ಬಜಗೋಳಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.