ರಜತಾದ್ರಿಯ ಜಿಪಂನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಣಿಪಾಲ
ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಈ ವರ್ಷ ನಮ್ಮ ಶೌಚಾಲಯ ನಮ್ಮ ಗೌರವ ಹಾಗೂ ಅಂದದ ಶೌಚಾಲಯ ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ನ.19ರಿಂದ ಡಿ.10ರ ವರೆಗೆ ವಿಶೇಷ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಮಂಗಳವಾರ ಇಲ್ಲಿನ ರಜತಾದ್ರಿಯ ಜಿಪಂನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ಪ್ರತಿನಿತ್ಯ ನಿರಂತರವಾಗಿ ಶೌಚಾಲಯಗಳನ್ನು ಬಳಸುವಂತೆ ಜನಸಾಮಾನ್ಯರಿಗೆ ಪ್ರೇರೇಪಿಸುವ ಉದ್ದೇಶದಿಂದ ಪ್ರತಿವರ್ಷ ನ.19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತಿದೆ. ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಈ ಆಂದೋಲನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ತಾ.ಪಂ.ಗಳಲ್ಲಿ ಶಿಫಾರಸ್ಸುಗೊಂಡ ಅತ್ಯುತ್ತಮ ಗೃಹ ಶೌಚಾಲಯಗಳ ಪೈಕಿ 5ನ್ನು ಆಯ್ಕೆ ಮಾಡುವುದು ಹಾಗೂ ಸಮುದಾಯ ಶೌಚಾಲಯಗಳ ಪೈಕಿ 5ನ್ನು ಆಯ್ಕೆ ಮಾಡಿ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.ವಿಶೇಷ ಆಂದೋಲನ ಅಂಗವಾಗಿ ಎಲ್ಲ ತಾಲೂಕು ಹಾಗೂ ಗ್ರಾ.ಪಂ.ಗಳಲ್ಲಿ ಶೌಚಾಲಯ ಬಳಕೆ ಕುರಿತು ಸಮೀಕ್ಷೆ ನಡೆಸಲಾಗುವುದು. ಗೃಹ ಶೌಚಾಲಯಗಳನ್ನು ನಿರಂತರವಾಗಿ ಬಳಸುವ ಫಲಾನುಭವಿಗಳನ್ನು ಗುರುತಿಸಿ ಬಹುಮಾನ ನೀಡಿ ಗೌರವಿಸಲಾಗುವುದು. ಸ್ಪರ್ಧೆ ಆಯೋಜಿಸಿ ಅತ್ಯುತ್ತಮ ವೈಯಕ್ತಿಕ ಗೃಹ ಶೌಚಾಲಯಗಳನ್ನು ಗುರುತಿಸಿ ಜಿಲ್ಲಾ ಮಟ್ಟದ ಸ್ಪರ್ಧೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ಶಿಬಿರ ಆಯೋಜಿಸಲಾಗುವುದು. ಶೌಚಾಲಯ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೌಚಾಲಯ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಸಮುದಾಯ ಶೌಚಾಲಯಗಳನ್ನು ಶುಚಿತ್ವಗೊಳಿಸಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲು ಹಾಗೂ ಅವುಗಳ ಸೌಂದರ್ಯೀಕರಣಕ್ಕೆ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದರು.ರೋಗಿಗಳು, ಮಕ್ಕಳು ಹಾಗೂ ಹದಿ ಹರೆಯದವರಿಗೆ ಅಂಗನವಾಡಿ, ಆಶಾ ಹಾಗೂ ಶಿಕ್ಷಕರು ಜಾಗೃತಿ ಮೂಡಿಸಲಿದ್ದಾರೆ. ಶಾಲೆಗಳಲ್ಲಿ ಈ ಕುರಿತು ನಾಟಕ, ಕಿರುಚಿತ್ರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದರೊಂದಿಗೆ ಸಾಮಾಜಿಕ ಜಾಣತಾಣಗಳಲ್ಲಿಯೂ ಶೌಚಾಲಯ ಆಂದೋಲನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.ಸಭೆಯಲ್ಲಿ ಜಿಪಂ ಸಿಇಒ ಪ್ರತೀಕ್ ಬಾಯಲ್, ಸಿಪಿಒ ಉದಯ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.