ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ದೇಶದ ಎಲ್ಲಾ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಸರ್ಕಾರ ಸಂವಿಧಾನಬದ್ದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿರುವುದು ಖಂಡನೀಯವೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಜನವಿರೋಧಿ, ದಲಿತ, ಹಿಂದುಳಿದ, ಕಾರ್ಮಿಕ, ಅಲ್ಪಸಂಖ್ಯಾತರು, ಮಹಿಳಾ ವಿರೋಧಿ ಕಾಯಿದೆಗಳನ್ನು ವಿರೋಧಿಸಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.ಬಿಹಾರ, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಪಶ್ಚಿಮ ಬಂಗಾಳದಲ್ಲಿ 58 ಲಕ್ಷ ಮತದಾರರನ್ನು ತೆಗೆದುಹಾಕಲು ಈಗಾಗಲೆ ಸೂಚಿಸಿರುವುದನ್ನು ವಿರೋಧಿಸಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಿಶೇಷ ಮತಪಟ್ಟಿ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದರು.
ಸ್ಲಂ ಜನಾಂದೋಲನ ಕರ್ನಾಟಕ ಸಾವಿತ್ರಿಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಸಂಯೋಜಕಿ ಸುಧಾ, ಶಾಂತಮ್ಮ, ನೀಲಮ್ಮ, ಕೆ.ರಾಜಣ್ಣ, ಬಸಮ್ಮ, ನಾಗರತ್ನಮ್ಮ, ಬಿ.ಎಸ್.ಪ್ರಭಾವತಿ, ಕಮಲಮ್ಮ, ಬಿ.ಎಸ್.ಮಂಜಣ್ಣ, ವಿನಾಯಕ, ಆರ್.ರಾಮಪ್ಪ, ಟಿ.ಶಫಿವುಲ್ಲಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.