ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಸಮಾಜ ಆಕ್ರೋಶ

KannadaprabhaNewsNetwork | Published : Apr 20, 2025 1:48 AM

ಸಾರಾಂಶ

ಬೀದರ್‌ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗಿಸಿರುವುದನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಹಾವೇರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹಾವೇರಿ: ಬ್ರಾಹ್ಮಣರ ಶಾಂತಿಪ್ರಿಯರೇ ಹೊರತು ಹೇಡಿಗಳಲ್ಲ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬ್ರಾಹ್ಮಣರಿಗೆ ಏನು ಮಾಡಿದರೂ ನಡೆಯುತ್ತದೆ ಎಂಬ ಮನೋಭಾವನೆಯನ್ನು ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಬ್ರಾಹ್ಮಣ ಸಮಾಜದ ಮುಖಂಡರು, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೀದರ್‌ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗಿಸಿರುವುದನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿರುವ ಸಮಾಜದ ಮುಖಂಡರು, ಶಿವಮೊಗ್ಗ ಹಾಗೂ ಬೀದರ್ ನಗರಗಳಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಇನ್ನುಳಿದ ಇತರ ಸಮಾಜದ ಕೆಲವು ವಿದ್ಯಾರ್ಥಿಗಳು ಧರಿಸಿದ ಜನಿವಾರ ಹಾಗೂ ಕೈಗೆ ಕಟ್ಟಿಕೊಂಡಿದ್ದ ಕಾಶಿದಾರ-ಶಿವದಾರವನ್ನು ತೆಗೆಸಿರುವುದು ಖಂಡನೀಯ. ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಖಂಡನೀಯ. ವಿದ್ಯಾರ್ಥಿಗಳು ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಉತ್ತಮ ಭವಿಷ್ಯದ ಕನಸು ಕಂಡಿದ್ದರು. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಸಿಬ್ಬಂದಿ ಈ ಕೃತ್ಯ ವಿದ್ಯಾರ್ಥಿಗಳು ಹಾಗೂ ಪಾಲಕರ ಮನೋಸ್ಥೈರ್ಯವನ್ನು ಕುಗ್ಗಿಸುತ್ತಿದೆ. ಇದನ್ನು ಬ್ರಾಹ್ಮಣ ಸಮಾಜ ತೀವ್ರವಾಗಿ ಖಂಡಿಸುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಮಾನಸಿಕ ಅಸ್ವಸ್ಥತೆಯ ವ್ಯಕ್ತಿಗಳನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥ ಹೀನಮನಸ್ಸಿನ ಪರೀಕ್ಷಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ನೊಂದ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಅನುವು ಮಾಡಿಕೊಳ್ಳಬೇಕು. ಆದ ಘಟನೆಗೆ ಕ್ಷಮೆ ಕೇಳುವ ಪರಿಪಾಠ ಬಿಡಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಸಿಬ್ಬಂದಿ ಮಾಡಿದ ತಪ್ಪಿಗೆ ಶಿಸ್ತು ಕ್ರಮ ಕೈಗೊಂಡು ಮಾದರಿಯಾಗಬೇಕು. ವಿದ್ಯಾರ್ಥಿಗಳ ಮನೋಸ್ಥೈರ್ಯ ಕೆಡಿಸುವ ಮಾನಸಿಕ ಅಸ್ವಸ್ಥತೆಯ ನೌಕರರನ್ನು ಸೇವೆಯಿಂದಲೇ ವಜಾ ಮಾಡಬೇಕು. ಜಾತಿಯಿಂದ ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ಏನು ಮಾಡಿದರೂ ನಡೆಯುತ್ತದೆ ಎನ್ನುವ ಭಾವನೆಯಿದ್ದರೆ ಅದನ್ನು ನಿಲ್ಲಿಸಬೇಕು. ಸಿಇಟಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಜಿಲ್ಲಾಧ್ಯಕ್ಷ ವಸಂತ ಮೋಕ್ತಾಲಿ, ವಿಪ್ರ ಸಮಾಜದ ಪ್ರಮುಖರಾದ ಪ್ರಭಾಕರರಾವ್‌ ಮಂಗಳೂರ, ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ ದತ್ತಾತ್ರೇಯ ನಾಡಗೇರ, ಸಂಜಯ ನಾಯಕ, ರಮೇಶ ಕಡಕೋಳ, ದೀಪಾ ಪಾಟೀಲ, ಉಮೇಶ ರಟ್ಟಿಹಳ್ಳಿ, ವಿನಾಯಕ ಹುದ್ದಾರ, ಗುರುರಾಜ ಶಿರಹಟ್ಟಿ, ನಾಗರಾಜ ಗಡಗಿ, ರಾಜು ಪುಣ್ಯವಂತರ, ಸುಬ್ರಹ್ಮಣ್ಯ ಉದಗಟ್ಟಿ, ಉದಯ ಕುಲಕರ್ಣಿ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ ಸಮಾಜದ ಮುಖಂಡರು ಇದ್ದರು.

Share this article