ನೀಟ್‌ ಪರೀಕ್ಷೆ ರದ್ದುಗೊಳಿಸಿದ್ದಕ್ಕೆ ಆಕ್ರೋಶ

KannadaprabhaNewsNetwork |  
Published : Jun 03, 2026, 02:00 AM IST
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕರ್ನಾಟಕ ಘಟಕದಿಂದ ಮಂಗಳವಾರ ಹುಬ್ಬಳ್ಳಿಯ ಬಿವಿಬಿ ಕಾಲೇಜು ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. | Kannada Prabha

ಸಾರಾಂಶ

ಕಳೆದ ಎರಡ್ಮೂರು ವರ್ಷಗಳಲ್ಲಿ ಎರಡು ಬಾರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ವೈಫಲ್ಯ ಕಾರಣ. ಇದನ್ನು ರದ್ದುಪಡಿಸಬೇಕೆಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಒತ್ತಾಯಿಸಿದೆ.

ಹುಬ್ಬಳ್ಳಿ:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದುಗೊಳಿಸಿರುವುದನ್ನು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕರ್ನಾಟಕ ಘಟಕದಿಂದ ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಎದುರು ನೂರಾರು ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನೀಟ್ ಸೋರಿಕೆಯನ್ನು ತೀವ್ರವಾಗಿ ಖಂಡಿಸಿದರು. ಕಳೆದ 2-3 ವರ್ಷಗಳಲ್ಲಿ ಎರಡು ಬಾರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ವೈಫಲ್ಯ ಕಾರಣ. ಇದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವುದರಿಂದ ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಗಗನಕುಸುಮವಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಒತ್ತಡದಿಂದಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಅನ್ವಯ 2023ರಲ್ಲಿ ದೇಶದಲ್ಲಿ 13,892 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಇನ್ನೂ ಹೆಚ್ಚುತ್ತಿದೆ ಎಂದರು.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಅವರ ಭವಿಷ್ಯದ ಜತೆ ಆಟವಾಡಬಾರದು. ನೀಟ್ ವ್ಯವಸ್ಥೆ ಮರುಪರಿಶೀಲಿಸಿ, ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಬೇಕು. ನೀಟ್ ರದ್ದುಪಡಿಸಿ, ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲಿನಂತೆ ಸಿಇಟಿ ನಡೆಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಘಟಕದ ಕಾರ್ಯದರ್ಶಿ ವಿಶಾಲ ಮಾನೆ, ಕಾರ್ತಿಕ್ ಕಾಡದೇವರಮಠ, ಕಲ್ಮೇಶ ಉಳ್ಳಾಗಡ್ಡಿ, ಚಂದ್ರಶೇಖರ ಕಂಬಳಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಲವಾದರೂ ಹಾವೇರಿ ಜಿಲ್ಲೆಗೆ ಸಿಗುತ್ತಾ ಮಂತ್ರಿ ಸ್ಥಾನ?
ಬಳ್ಳಾರಿಯಲ್ಲಿ ಗುಡುಗು-ಸಿಡಿಲು ಸಮೇತ ಮಳೆನೂರಕ್ಕೂ ಅಧಿಕ ಮರಗಳು ಧರೆಗೆ