ಕನ್ನಡಪ್ರಭ ವಾರ್ತೆ ಹಾಸನ
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜುಲೈ ೬ರಂದು ನಡೆದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಟನೆಗಳಿಗೆ ಪೂರ್ವ ಮಾಹಿತಿ ನೀಡಿಲ್ಲ. ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನೂ ನಡೆಸದೆ, ಕಾರ್ಯಸೂಚಿ ರೂಪಿಸದೆ ಅತ್ಯಂತ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೂರಿದರು. ರಾಷ್ಟ್ರ ನಾಯಕರ ಕಾರ್ಯಕ್ರಮ ಆಯೋಜಿಸುವಾಗ ಅವರ ಜೀವನ, ಸಾಧನೆ ಮತ್ತು ವಿಚಾರಧಾರೆಗಳ ಕುರಿತು ಉಪನ್ಯಾಸ ಅಥವಾ ಚರ್ಚೆ ನಡೆಸುವುದು ಅಗತ್ಯ. ಆದರೆ ಕೇವಲ ಪುಷ್ಪನಮನ ಸಲ್ಲಿಸಿ ಎರಡು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸಿರುವುದು ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದಂತಾಗಿದೆ ಎಂದು ಆರೋಪಿಸಿದರು. ಈ ಕಾರ್ಯಕ್ರಮದ ಕುರಿತು ಪ್ರಶ್ನೆ ಕೇಳಿದ ಸಮುದಾಯದ ಮುಖಂಡರೊಂದಿಗೆ ಇಲಾಖೆಯ ಅಧಿಕಾರಿಯೊಬ್ಬರು ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವುದು ಖಂಡನೀಯ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿರುವುದು ವಿಡಿಯೊ ದೃಶ್ಯಗಳಲ್ಲಿ ಕಂಡುಬರುತ್ತದೆ ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಜೊತೆಗೆ ರಾಷ್ಟ್ರೀಯ ನಾಯಕರ ಜಯಂತಿ ಹಾಗೂ ಪುಣ್ಯಸ್ಮರಣೆ ಕಾರ್ಯಕ್ರಮಗಳ ಜವಾಬ್ದಾರಿ ಹೊತ್ತಿರುವ ಪ್ರಮುಖ ಅಧಿಕಾರಿಯಾಗಿದ್ದಾರೆ. ಇಂತಹ ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಧಿಕಾರಿಯೇ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಇಲಾಖೆಯ ಗೌರವಕ್ಕೆ ಧಕ್ಕೆ ತಂದಿದೆ ಎಂದು ಟೀಕಿಸಿದರು.ದೂದ್‌ಪೀರ್ ಅವರ ಆಡಳಿತಾವಧಿಯಲ್ಲಿ ಹಲವಾರು ಅಕ್ರಮಗಳು ನಡೆದಿರುವ ಶಂಕೆಯಿದ್ದು, ಅವುಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು. ಅವರನ್ನು ಕೂಡಲೇ ಅಮಾನತುಗೊಳಿಸಿ ಇಲಾಖಾ ಕ್ರಮ ಜರುಗಿಸಬೇಕು ಎಂದು ಸರ್ಕಾರ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಡಾ. ಬಾಬು ಜಗಜೀವನ್ ರಾಮ್ ಅವರಂತಹ ರಾಷ್ಟ್ರ ನಾಯಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಗಳನ್ನು ಸರ್ಕಾರ ಅತ್ಯಂತ ಗೌರವಯುತವಾಗಿ ನಡೆಸುತ್ತಿರುವ ಸಂದರ್ಭದಲ್ಲಿ ಹಾಸನದಲ್ಲಿ ನಡೆದಿರುವ ಈ ಘಟನೆ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ಈ ಪ್ರಕರಣವನ್ನು ಜಿಲ್ಲಾಧಿಕಾರಿಗಳು ಸಮಗ್ರವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜನಪರ ಚಳವಳಿಗಳ ಒಕ್ಕೂಟದೊಂದಿಗೆ ಸಮಾಜ ಕಲ್ಯಾಣ ಇಲಾಖೆಗೆ ಮುತ್ತಿಗೆ ಹಾಕಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಹರಳಯ್ಯ ಸ್ವಾಮೀಜಿ ಮೇಲಿನ ಹಲ್ಲೆ ಖಂಡನೆ:
ಚಿತ್ರದುರ್ಗದಲ್ಲಿ ಶ್ರೀ ಬಸವ ಹರಳಯ್ಯ ಮಹಾಸ್ವಾಮೀಜಿಗಳ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ಟಿ. ಆರ್. ವಿಜಯ್ ಕುಮಾರ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಭದ್ರತೆ ಒದಗಿಸಬೇಕು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ವೀರಭದ್ರಪ್ಪ, ವಸಂತಮ್ಮ, ತಿರುಮನಹಳ್ಳಿ ಮುನಿಸ್ವಾಮಿ, ಹೇಮಂತ್, ಜಯಕುಮಾರ್, ಎಸ್.ಡಿ. ಚಂದ್ರು, ಜಿ.ಎಂ. ಹಟ್ಟಿಗಯ್ಯಮ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.