ಸೂರಿಲ್ಲದವರಿಗೆ 15 ಲಕ್ಷಕ್ಕೂ ಹೆಚ್ಚು ನಿವೇಶನ

KannadaprabhaNewsNetwork |  
Published : Sep 06, 2026, 01:15 AM IST
 | Kannada Prabha

ಸಾರಾಂಶ

ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನ ಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ. ಬಹಳಷ್ಟು ಜನರಿಗೆ ಜಾಗ ಇಲ್ಲ, ಮನೆಯೂ ಇಲ್ಲ. ನಿವೇಶನ ನೀಡಿದರೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ತುಮಕೂರು

ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನ ಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ. ಬಹಳಷ್ಟು ಜನರಿಗೆ ಜಾಗ ಇಲ್ಲ, ಮನೆಯೂ ಇಲ್ಲ. ನಿವೇಶನ ನೀಡಿದರೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಶನಿವಾರ ಗುಬ್ಬಿ ಪಟ್ಟಣದಲ್ಲಿ ಆಯೋಜಿಸಿದ್ದ ಮೊದಲ ಪ್ರಜಾಸೇವಾ ಅಭಿಯಾನ ಜನಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಕಂದಾಯ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡ ಬಳಿಕ ಹೊಸ ಯೋಜನೆಯನ್ನು ಹಾಕಿಕೊಂಡಿದ್ದೇನೆ. ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂಬುದು ನನ್ನ ಆಶಯ. ಬಡವರಿಗೆ 30*40 ಅಳತೆಯ ನಿವೇಶನವನ್ನು ಉಚಿತವಾಗಿ ನೀಡಲಾಗುವುದು. ಲಭ್ಯ ಇರುವ ಸರ್ಕಾರಿ ಜಾಗದಲ್ಲಿ ನಿವೇಶನ ಸಿದ್ಧಪಡಿಸಿ, ಬಡವರಿಗೆ ಕೊಡುವ ಕೆಲಸ ಮಾಡಲು ಸರ್ಕಾರ ಹೊರಟಿದ್ದು, ಶಾಸಕರ ಮೂಲಕ ಗ್ರಾಮ ಸಭೆಗಳನ್ನು ನಡೆಸಿ, ಅರ್ಹ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯನ್ನು ಹೊಸದಾಗಿ ಆರಂಭಿಸಲಾಗುತ್ತಿದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದೆ ಈ ಸೇವೆ ಲೋಕಾರ್ಪಣೆಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಕರೆಯಂತೆ ಇಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ನೂತನ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದಾರೆ ಎಂದರು.

ಇಡೀ ರಾಜ್ಯದಲ್ಲಿ ಭೀಕರ ಬರ ಎದುರಾಗಿದೆ. ಈ ರೀತಿಯ ಬರ 150 ವರ್ಷದ ಹಿಂದೆ ಬಂದಿತ್ತು ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಸೂರ್ಯಕಾಂತಿ, ಜೋಳ, ಹೂವು, ನಂಜನಗೂಡು ರಸಬಾಳೆ ತೋಟಗಳು ಒಣಗುತ್ತಿರುವುದು ಕಂಡು ಬಂತು. ಹಳ್ಳಿ-ಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ. ಇದನ್ನು ನೋಡಿದಾಗ ಮನಸ್ಸಿಗೆ ನೋವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಗುಬ್ಬಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಜನರ ಅನುಕೂಲಕ್ಕಾಗಿ ಮುಖ್ಯ ಮಂತ್ರಿಗಳ ಆಶಯದಂತೆ ಹೊಸದಾಗಿ ಪ್ರಜಾ ಸೇವಾ ಇಲಾಖೆಯನ್ನು ಸೃಜಿಸಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಪ್ರಜಾ ಸೇವಾ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಇಚ್ಛಾಶಕ್ತಿಯಿಂದ ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಪರಿಹಾರ ಒದಗಿಸಿದಾಗ ಮಾತ್ರ ಮುಖ್ಯ ಮಂತ್ರಿಗಳ ಆಶಯ ಸಾರ್ಥಕವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿದರು. ಈ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜ .ಬಿ.ವಿ, ಗ್ಯಾರಂಟಿ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಘನತೆ ಗಾಳಿಗೆ ಬಿಟ್ಟು, ಭಾಷಣದಲ್ಲಿ ಗೌರವ ಕೊಟ್ಟು ಹೊರಟರು!
ದೇವದುರ್ಗದಲ್ಲಿ ಪ್ರಜಾ ಸೇವೆ ಅಂದೋಲನಕ್ಕೆ ಶಾಸಕಿ ಚಾಲನೆ