ಸೀಗೆ ಹುಣ್ಣಿಮೆ: ಹುಲಿಗೆಮ್ಮನ ದರ್ಶನ ಪಡೆದ 3 ಲಕ್ಷಕ್ಕೂ ಅಧಿಕ ಭಕ್ತರು

KannadaprabhaNewsNetwork |  
Published : Oct 27, 2026, 02:15 AM IST
ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಹುಣ್ಣಿಮೆ ದಿನ ಲಕ್ಷಾಂತರ ಭಕ್ತರು ಆಗಮಿಸಿದ್ದರು. | Kannada Prabha

ಸಾರಾಂಶ

ಸೀಗೆ ಹುಣ್ಣಿಮೆ ಪ್ರಯುಕ್ತ ಸೋಮವಾರ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ 3 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಮುನಿರಾಬಾದ್: ಸೀಗೆ ಹುಣ್ಣಿಮೆ ಪ್ರಯುಕ್ತ ಸೋಮವಾರ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ 3 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಹುಲಿಗೆಮ್ಮ ದೇವಿಗೆ ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಗರ್ಭಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿತ್ತು.

ಭಾನುವಾರ ಸಂಜೆ ವೇಳೆಯಿಂದಲೇ ಹುಲಿಗಿ ಗ್ರಾಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ರಾತ್ರಿ ದೇವಸ್ಥಾನದ ಆವರಣದಲ್ಲಿ ತಂಗಿದ್ದ ಭಕ್ತರು ಸೋಮವಾರ ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಚಳಿಯನ್ನೂ ಲೆಕ್ಕಿಸದೆ ನದಿಯಲ್ಲಿ ಪುಣ್ಯಸ್ನಾನ ಮಾಡಿ ಅಮ್ಮನವರ ದರ್ಶನ ಪಡೆದರು.

ಬೆಳಗ್ಗೆ 8 ಗಂಟೆಯ ವೇಳೆಗೆ ಸುಮಾರು 50 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಬೆಳಗ್ಗೆ 10 ಗಂಟೆಗೆ ದರ್ಶನ ಪಡೆದವರ ಸಂಖ್ಯೆ ಒಂದು ಲಕ್ಷ ದಾಟಿತು. ಮಧ್ಯಾಹ್ನ 1 ಗಂಟೆಗೆ ಎರಡು ಲಕ್ಷ ಹಾಗೂ ಸಂಜೆ 4 ಗಂಟೆಯ ವೇಳೆಗೆ ಮೂರು ಲಕ್ಷಕ್ಕೂ ಅಧಿಕ ಭಕ್ತರು ಅಮ್ಮನ ದರ್ಶನ ಪಡೆದರು.

ಟ್ರಾಫಿಕ್ ಜಾಮ್‌ಗೆ ಮುಕ್ತಿ: ಹುಲಿಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯನ್ನು ಸೀಗೆ ಹುಣ್ಣಿಮೆ ಪ್ರಯುಕ್ತ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದರಿಂದ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಅನುಕೂಲವಾಗಿದೆ. ಹುಲಿಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ಇದರಿಂದ ಪ್ರಯೋಜನವಾಗಲಿದೆ.

ಈ ಹಿಂದೆ ರೈಲ್ವೆ ಗೇಟ್ ಹಾಕಿದಾಗ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು. ಇದರಿಂದ ಭಕ್ತರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೊಂದರೆ ಅನುಭವಿಸುತ್ತಿದ್ದರು. ಇದೀಗ ಮೇಲ್ಸೇತುವೆ ಮೂಲಕ ಭಕ್ತರು ನೇರವಾಗಿ ದೇವಸ್ಥಾನದತ್ತ ತೆರಳಲು ಅನುಕೂಲವಾಗಿದೆ.

ಕನ್ನಡಪ್ರಭ ವರದಿಗೆ ಫಲಶ್ರುತಿ: ರೈಲ್ವೆ ಗೇಟ್‌ನಿಂದ ಉಂಟಾಗುತ್ತಿದ್ದ ಟ್ರಾಫಿಕ್ ಜಾಮ್ ಹಾಗೂ ಭಕ್ತರು ಅನುಭವಿಸುತ್ತಿದ್ದ ತೊಂದರೆಗಳ ಕುರಿತು ''''ಕನ್ನಡಪ್ರಭ'''' ಪತ್ರಿಕೆ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಭಕ್ತರ ಅನುಕೂಲಕ್ಕಾಗಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವ ಅಗತ್ಯದ ಬಗ್ಗೆಯೂ ವಿಶೇಷ ವರದಿ ಪ್ರಕಟಿಸಲಾಗಿತ್ತು. ಬಳಿಕ ಕೇಂದ್ರ ಸರ್ಕಾರ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಿದೆ.

ಸೇತುವೆ ಸಂಚಾರಕ್ಕೆ ಮುಕ್ತವಾಗಿರುವುದು ಹರ್ಷ ತಂದಿದೆ ಎಂದು ಹುಲಿಗಿ ಗ್ರಾಮದ ನಿವೃತ್ತ ಸೈನಿಕ ಸಂಜೀವ್ ತೋಟಗಂಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ''''ಕನ್ನಡಪ್ರಭ'''' ಕಾರ್ಯ ಶ್ಲಾಘನೀಯ ಎಂದು ಅವರು ಅಭಿನಂದಿಸಿದ್ದಾರೆ.

ದಾಸೋಹ ವ್ಯವಸ್ಥೆ: ಸೀಗೆ ಹುಣ್ಣಿಮೆ ಪ್ರಯುಕ್ತ ಶ್ರೀ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ, ಭಕ್ತರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ಗಂಗಾವತಿ, ಕೊಪ್ಪಳ ಹಾಗೂ ಹೊಸಪೇಟೆ ನಗರಗಳಿಂದ ಹುಲಿಗಿ ಗ್ರಾಮಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಿತ್ತು.

ಭದ್ರತೆಗೆ ಆಗ್ರಹ: ದೇವಸ್ಥಾನಕ್ಕೆ ಆಗಮಿಸುವ ಭಕ್ತರು ನದಿಯಲ್ಲಿ ಪುಣ್ಯಸ್ನಾನ ಮಾಡುವುದರಿಂದ ನದಿ ದಂಡೆಯಲ್ಲಿ ಸುಸಜ್ಜಿತ ಸ್ನಾನದ ಘಟ್ಟ ನಿರ್ಮಿಸುವುದು ಅತ್ಯಗತ್ಯವಾಗಿದೆ. ವಿಶೇಷವಾಗಿ ಮಹಿಳಾ ಭಕ್ತರ ಸುರಕ್ಷತೆ ಹಾಗೂ ಭದ್ರತೆಗೆ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಆದ್ಯತೆ ನೀಡಬೇಕಿದೆ.

ನದಿ ದಂಡೆ ಪ್ರದೇಶದಲ್ಲಿ ಕಳ್ಳತನದ ಘಟನೆಗಳು ನಡೆಯುತ್ತಿವೆ ಎಂಬ ಆತಂಕವೂ ಭಕ್ತರಿಂದ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಬೇರೆ ಊರುಗಳಿಂದ ಬಂದಿದ್ದ ಭಕ್ತರು ತಮ್ಮ ಬೆಲೆಬಾಳುವ ವಸ್ತುಗಳನ್ನು ನದಿ ದಂಡೆಯಲ್ಲಿ ಇಟ್ಟು ಸ್ನಾನಕ್ಕೆ ತೆರಳಿದಾಗ ಕಳ್ಳರು ಕೈಚಳಕ ತೋರಿಸಿದ್ದಾರೆ. ಹೀಗಾಗಿ ಭಕ್ತರ ಅನುಕೂಲಕ್ಕಾಗಿ ನದಿ ದಂಡೆಯಲ್ಲಿ ಲಾಕರ್ ಸೌಲಭ್ಯ ಕಲ್ಪಿಸಬೇಕು. ಜತೆಗೆ, ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು