ಕನ್ನಡಪ್ರಭ ವಾರ್ತೆ ಮಂಡ್ಯ
ನಾಳೆ ಕನ್ನಡ ಭವನಕ್ಕೆ ಶಂಕುಸ್ಥಾಪನೆ: ಜಿಲ್ಲಾಧಿಕಾರಿ
ಮಂಡ್ಯ ನಗರದ ಸರ್ ಎಂ.ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣ ಆವರಣದ ೧೩ ಗುಂಟೆ ಸರ್ಕಾರಿ ಜಮೀನಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜ.೩೦ರಂದು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯಾಗಿ ಆಯೋಜನೆ ಮಾಡಿದ ಸವಿನೆನಪಿಗಾಗಿ ಸಮ್ಮೇಳನದಲ್ಲಿ ವಿವಿಧ ಮೂಲಗಳಿಂದ ಸಂಗ್ರಹಿಸಿದ ಹಣದ ಉಳಿತಾಯ ೨.೫೦ ಕೋಟಿ ರು. ಹಾಗೂ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ೩.೦೦ ಕೋಟಿ ರು. ಸೇರಿ ಒಟ್ಟು ೫.೫೦ ಕೋಟಿ ರು. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ.
ಅಂದು ಬೆಳಗ್ಗೆ ೮.೩೦ ಗಂಟೆಗೆ ಕನ್ನಡ ಭವನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ನಡೆಯಲಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರ ಸಮ್ಮುಖದಲ್ಲಿ ನೆರವೇರಿಸಲು ಉದ್ದೇಶಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.