ಕಾರ್ಕಳ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಂಡು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಸೂಚಿಸಿದರು.
ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಕುರಿತು ಸಿಡಿಪಿಒ ಅವರನ್ನು ತರಾಟೆಗೆ ತೆಗೆದುಕೊಂಡ ಅಜಿತ್ ಹೆಗ್ಡೆ, ಯೋಜನೆಯಡಿ ಫಲಾನುಭವಿಗಳಾಗಿದ್ದ ಸುಮಾರು 1,200 ಮಂದಿ ಮೃತಪಟ್ಟಿರುವ ಪ್ರಕರಣಗಳಿದ್ದು, ಅವರ ಮಾಹಿತಿಯನ್ನು ಸಮರ್ಪಕವಾಗಿ ಪರಿಷ್ಕರಿಸುವಂತೆ ಸೂಚಿಸಿದರು. ಯುವನಿಧಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಅನ್ನಭಾಗ್ಯ ಯೋಜನೆ ಕುರಿತು ಮಾತನಾಡಿದ ಶಹನಾಜ್, ಕಾರ್ಕಳ ತಾಲೂಕಿನಲ್ಲಿ ಒಟ್ಟು 31,068 ಪಡಿತರ ಚೀಟಿಗಳಿದ್ದು, ಈ ಪೈಕಿ 18,573 ಚೀಟಿಗಳಿಗೆ ಜಾತಿ ಪ್ರಮಾಣಪತ್ರದ ಅಗತ್ಯವಿದೆ. ಇ-ಕೆವೈಸಿ ಹಾಗೂ ಕ್ರಾಸ್ ಮ್ಯಾಪಿಂಗ್ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಬೇಕಾಗಿದೆ. ಸೆ. 30ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಇದ್ದು, ಗ್ರಾಮ ಆಡಳಿತಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯವನ್ನು ತ್ವರಿತಗೊಳಿಸಬೇಕು ಎಂದು ಹೇಳಿದರು.ಸರ್ವರ್ ಸಮಸ್ಯೆಯಿಂದಾಗಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳು ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದರು. ಕಾರ್ಕಳ ಹಾಗೂ ಎರ್ಲಪಾಡಿ ಭಾಗಕ್ಕೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.ನಿಟ್ಟೆ ಮೆಸ್ಕಾಂ ಜೆಇ ವಿನಾಯಕ್ ಪೈ ಮಾತನಾಡಿ, ಗೃಹಜ್ಯೋತಿ ಯೋಜನೆಯಲ್ಲಿ ಶೇ. 99ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. 2,067 ಮನೆಗಳು ಯೋಜನೆಯಿಂದ ಹೊರ ಗುಳಿದಿದ್ದು, ಅವರಲ್ಲಿ ಹಲವರು ಹೊರ ರಾಜ್ಯಗಳಲ್ಲಿ ವಾಸಿಸುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಕ್ರಾಸ್ ಮ್ಯಾಪಿಂಗ್ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.ಗೃಹಜ್ಯೋತಿ ಯೋಜನೆಯಲ್ಲಿ ಶೇ. 99ರಷ್ಟು ಪ್ರಗತಿ ಸಾಧಿಸಿದ ಮೆಸ್ಕಾಂ ಇಲಾಖೆಯ ವಿನಾಯಕ್ ಪೈ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು.ಶಕ್ತಿ ಯೋಜನೆಯ ಕುರಿತು ಸಹಾಯಕ ಸಂಚಾರಿ ನಿರೀಕ್ಷಕ ರವಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಇದುವರೆಗೆ ಸುಮಾರು 60 ಲಕ್ಷ ಮಂದಿ ಪ್ರಯಾಣಿಸಿ ಫಲಾನುಭವಿಗಳಾಗಿದ್ದಾರೆ ಎಂದರು. ಕಣಂಜಾರ್ ಹಾಗೂ ಪಳ್ಳಿ ಭಾಗದಲ್ಲಿ ಬಸ್‌ಗಳ ನಿಲುಗಡೆ ಕಡಿಮೆಯಾಗಿರುವುದರಿಂದ ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು. ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.