ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಪ್ರಾಧಿಕಾರದ ಆದೇಶ, ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಇಲ್ಲದೆ ಜಲಾಶಯಗಳಲ್ಲಿ ಲಭ್ಯವಿರುವ ನೀರು ಕೆಆರ್‌ಎಸ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆಗಳಿಗೆ ಸಾಕಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಸಿಡಬ್ಲ್ಯೂಆರ್‌ಸಿ ಲಭ್ಯವಿರುವ ನೀರಿನ ಪ್ರಮಾಣ ಅವಲೋಕಿಸದೆ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಶಿಫಾರಸ್ಸು ಮಾಡಿರುವುದು ರಾಜ್ಯದ ರೈತರಿಗೆ ಮರಣ ಶಾಸನವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದರು.ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ಆದೇಶಕ್ಕೆ ಸರ್ಕಾರ ಬೆಲೆ ಕೊಡದೆ ರಾಜ್ಯದ ರೈತರ ಹಿತದೃಷ್ಟಿಯಿಂದ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಮ್ಮ ಜಲಾಶಯಗಳಲ್ಲಿ ನೀರಿನ ಲಭ್ಯತೆ ಇದ್ದರೆ ತಮಿಳುನಾಡಿಗೆ ಬಿಡುವುದು ಸಹಜ ಪ್ರಕ್ರಿಯೆ. ವಾಸ್ತವದಲ್ಲಿ ನಮ್ಮ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಇಂತಹ ಸಂಧಿಗ್ಧತೆಯಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶಿಸಿರುವ ಸಮಿತಿ ನಿಲುವು ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಹಿರೇಮರಳಿ ವಿಷ್ಣುವಿಠಲ, ಆಟೋ ಮಲ್ಲೇಶ್, ಕುಮಾರ ಜಲೇಂದ್ರ ಸೇರಿದಂತೆ ಇತರರು ಇದ್ದರು.