ಕನ್ನಡಪ್ರಭ ವಾರ್ತೆ ಗುಬ್ಬಿ
ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ನುರಿತ ಗುಣಮಟ್ಟದ ಶಿಕ್ಷಕರಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಉತ್ತಮ ಶಿಕ್ಷಣ ನೀಡಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ತ್ಯಾಗಟೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಪಾಠಶಾಲೆಯಿಂದ ಹಮ್ಮಿಕೊಂಡಿದ್ದ ವೈಭವದ ಮಕ್ಕಳ ಹಬ್ಬ 2024 -25 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಸಿ ಮಾತನಾಡಿದ ಅವರು ಎಪಿಜೆ ಅಬ್ದುಲ್ ಕಲಾಂ, ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಸರ್ಕಾರಿ ಶಾಲೆಗಳಲ್ಲಿ ಓದಿರುವವರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ತ್ಯಾಗಟೂರು ಸರ್ಕಾರಿ ಶಾಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನಾನು ಒದಗಿಸಲು ಸಿದ್ಧ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮನವಿ ಮಾಡಿದರು.
ಶ್ರೀ ವಿಭವ ವಿದ್ಯಾಶಂಕರ ಸ್ವಾಮೀಜಿ ಮಾತನಾಡಿ ಇಂಗ್ಲಿಷ್ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳು ಅನುತ್ತೀರ್ಣರಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಸರ್ಕಾರಿ ಶಾಲೆಯ ಮಕ್ಕಳು ಅನುತ್ತೀರ್ಣರಾದರೆ ತಮ್ಮ ಬದುಕಿನಲ್ಲಿ ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಮುನ್ನಡೆಯುತ್ತಾರೆ ಮರು ಪರೀಕ್ಷೆಯನ್ನು ಎದುರಿಸಿ ಯಶಸ್ಸು ಪಡೆಯುತ್ತಾರೆ. ವಿದ್ಯಾರ್ಥಿಗಳು ಪುಸ್ತಕಗಳನ್ನು ಆಳವಾಗಿ ಅಧ್ಯಯನ ಮಾಡುವ ಮೂಲಕ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಮಾತನಾಡಿ ವಿದ್ಯಾರ್ಥಿಗಳು ಭೌತಿಕ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಉತ್ತಮ ವಿದ್ಯಾಭ್ಯಾಸ ಪಡೆದು ಶಿಕ್ಷಣವಂತರಾಗಬೇಕು. ತ್ಯಾಗಟೂರು ಗ್ರಾಮಸ್ಥರು ಸಹಕಾರ ನೀಡಿದರೆ ಮುಂದಿನ ದಿನಗಳಲ್ಲಿ ಇಂಗ್ಲಿಷ್ ಶಿಕ್ಷಣ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಓಂಕಾರ್ ಪ್ರಸಾದ್, ಉಪಾಧ್ಯಕ್ಷೆ ನಳಿನಪ್ರಕಾಶ್, ಸದಸ್ಯರಾದ ವಿಜಯಲಕ್ಷ್ಮೀ, ಶಿವಕುಮಾರ್ ಸ್ವಾಮಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಧುಸೂಧನ, ಅಕ್ಷರ ದಾಸೋಹ ನಿರ್ದೇಶಕ ಜಗದೀಶ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಡಿ. ಪರಮೇಶ ಮುಖಂಡರಾದ ಕಿಡಿಗಣಪ್ಪ, ಯೋಗಾನಂದ ಕುಮಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಕೆಂಪಯ್ಯ, ದಯಾನಂದ, ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಹಾಜರಿದ್ದರು.