ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆ 27ನೇ ವರ್ಷದ ಶಾಲಾ ವೈಭವದ ಅಂಗವಾಗಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.ಸಂಸ್ಥೆ ಆವರಣದಲ್ಲಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ಸ್ವಾಮಿ ಸಾನಿಧ್ಯದಲ್ಲಿ ನಡೆದ ಸಮಾರಂಭವನ್ನು ಜಿಲ್ಲಾಧಿಕಾರಿ ಡಾ.ಕುಮಾರ್ ಉದ್ಘಾಟಿಸಿದರು. ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಪ್ರಸ್ತುತ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಮೂವರು ವಿದ್ಯಾರ್ಥಿಗಳು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 46 ವಿದ್ಯಾರ್ಥಿಗಳಿಗೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಈ.ಗಂಗಾಧರಸ್ವಾಮಿ, ತಹಸೀಲ್ದಾರ್ ಡಾ.ಸ್ಮಿತಾರಾಮು ಮತ್ತು ಪುರಸಭಾಧ್ಯಕ್ಷೆ ಕೋಕಿಲ ಅರುಣ್ ಅವರು ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಿದರು.
ಅಲ್ಲದೇ, ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಿ.ಎಚ್.ಕಾಳಿರಯ್ಯ ಹಾಗೂ ಬಿ.ಎನ್. ಮರಿಗೌಡರನ್ನು ಅಭಿನಂದಿಸಲಾಯಿತು.ಸಾನಿಧ್ಯ ವಹಿಸಿದ್ದ ಡಾ.ನಿಶ್ಚಲಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಪೋಷಕರು ಮತ್ತು ಶಿಕ್ಷಕರು ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸಿದರೆ ಭವಿಷ್ಯದಲ್ಲಿ ಸತ್ಪ್ರಜೆಗಳಾಗಲಿ ರೂಪುಗೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಪೋಷಕರು ಮಕ್ಕಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಅವರಿಗೆ ತಿದ್ದಿ ಬುದ್ದಿ ಹೇಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡುವಂತೆ ಅವರ ಭವಿಷ್ಯವನ್ನು ರೂಪಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪುಸ್ತಕಗಳನ್ನು ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಶಾಸಕ ಉದಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ನಿವೃತ್ತ ಪ್ರಾಂಶುಪಾಲ ಡಾ. ಬಿ.ಕೃಷ್ಣ, ಚಲನಚಿತ್ರ ಕಲಾವಿದ ರಾದ ಡಿಂಗ್ರ ನಾಗರಾಜು , ಶಂಕರ್, ಸ್ವಾತಿ ಲಿಂಗರಾಜು, ಬಿಗ್ ಬಾಸ್ ಸ್ಪರ್ದಿ ಗೋಲ್ಡ್ ಸುರೇಶ್, ಕಾಮಿಡಿ ಕಿಲಾಡಿ ಕಲಾವಿದೆ ಮಾನಸ ತುಕಾಲಿ ಸಂತೋಷ್, ಪೂರ್ಣ ಪ್ರಜ್ಞ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಸ್ತೂರಿ, ಕಾರ್ಯದರ್ಶಿ ಎಚ್.ಆರ್. ಅನಂತೇಗೌಡ ಹಾಗೂ ಶಿಕ್ಷಕ ವೃಂದ ಮತ್ತು ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.