ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ನೂತನ ಕನ್ನಡ ಭವನ ಕಟ್ಟಡಕ್ಕೆ ಸೋಮವಾರ ಭೇಟಿ ನೀಡಿ ಕನ್ನಡ ಭವನ ಲೋಕಾರ್ಪಣೆಗೆ ಜಿಲ್ಲಾಡಳಿತ ಕೈಗೊಂಡಿರುವ ಪೂರ್ವಸಿದ್ಧತೆ ಕಾರ್ಯಗಳನ್ನು ಪರಿಶೀಲಿಸಿದ ನಂತರ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಸುಮಾರು 17.83 ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿಂಗಾರಗೊಂಡಿರುವ ಕನ್ನಡ ಭವನವು ರಾಜ್ಯದಲ್ಲಿ ಮಾದರಿಯಾದ ಕಟ್ಟಡವಾಗಿದೆ. ಆಧುನಿಕ ತಂತ್ರಜ್ಞಾನ, ಬೆಳಕಿನ ತಂತ್ರಜ್ಞಾನ ಅಳವಡಿಕೆ, ಸುಸಜ್ಜಿತ ಸೌಂಡ್ ಸಿಸ್ಟಮ್ ಹಾಗೂ ವೇದಿಕೆ ಸೌಕರ್ಯಗಳನ್ನು ಅಳವಡಿಸಲಾಗಿದೆ. ಇಂತಹ ಭವನವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಆನಂತರ ಸದರಿ ಕಟ್ಟಡದಲ್ಲಿಯೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಸಮ್ಮೇಳನದ ಕಾರ್ಯಕ್ರಮಗಳನ್ನು ಎರಡು ದಿನಗಳ ಕಾಲ ಸಂಭ್ರಮ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿಗಳು ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಸಂಸದರು, ಶಾಸಕರುಗಳು, ನಿಗಮ ಮಂಡಳಿಗಳ ಮುಖ್ಯಸ್ಥರು, ರಾಜ್ಯ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕನ್ನಡ ಭವನ ನಿರ್ಮಾಣಕ್ಕೆ ಪ್ರಮುಖ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯ್ಲಿರನ್ನು ಸಹ ಆಹ್ವಾನಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಆಗಮನಿಸುವವರಿಗೆ ಆಸನ ವ್ಯವಸ್ಥೆ, ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಹಾಗೂ ವೇದಿಕೆ ಕಾರ್ಯಕಲಾಪಗಳು ಸುಸೂತ್ರವಾಗಿ ನಡೆಯಲು ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ಅನಿಲ್, ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಕೋಡಿ ರಂಗಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.