ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಕ್ರೀಯಾಶೀಲತೆ ಸಾಧ್ಯ: ಶಾಸಕ ಯಶ್ಪಾಲ್ ಎ. ಸುವರ್ಣ

KannadaprabhaNewsNetwork |  
Published : Mar 28, 2025, 12:31 AM IST
27ಕ್ರೀಡೆ | Kannada Prabha

ಸಾರಾಂಶ

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಗಳ ಸಹಕಾರದೊಂದಿಗೆ 2023-24 ನೇ ಸಾಲಿನ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುವುದರೊಂದಿಗೆ ಪ್ರತಿದಿನ ಕ್ರಿಯಾಶೀಲರಾಗಿ ಇರಲು ಸಾಧ್ಯ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು.

ಅವರು ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಗಳ ಸಹಕಾರದೊಂದಿಗೆ ನಡೆದ 2023-24 ನೇ ಸಾಲಿನ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರ ದೈಹಿಕ ಶಿಕ್ಷಕರಲ್ಲಿ ಉತ್ಸಾಹ ಮೂಡಿಸಲು ಅವರಿಗೆ ಕ್ರೀಡಾಕೂಟ ಆಯೋಜಿಸಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಯೋಗಕ್ಷೇಮವನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವ ದೈಹಿಕ ಶಿಕ್ಷಕರು ಕ್ರೀಡಾಕೂಟವನ್ನು ಆಯೋಜಿಸಿರುವುದು ಸಂತಸದ ಸಂಗತಿ ಎಂದರು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ, ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೈಹಿಕ ಶಿಕ್ಷಕರ ಕ್ರೀಡಾಕೂಟ ನಡೆಯುತ್ತಿದೆ. ಕ್ರೀಡಾಕೂಟಗಳು ದೈಹಿಕ ಶಿಕ್ಷಕರಿಗೆ ಹೊಸದೇನಲ್ಲ. ಅವರು ತಮ್ಮ ಶಾಲೆಯ ಮಕ್ಕಳು ರಾಷ್ಟೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ, ಪ್ರಶಸ್ತಿ ಪಡೆಯಲು ಅವಿರತ ಶ್ರಮ ವಹಿಸುತ್ತಿದ್ದಾರೆ ಎಂದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ದೈಹಿಕ ಶಿಕ್ಷಕರುಗಳು ಭಾಗವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಹಲವಾರು ಕ್ರೀಡಾ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿರುವ ದೈಹಿಕ ಶಿಕ್ಷಕರುಗಳು ಕೆಲವು ಕ್ರೀಡೆಗಳಲ್ಲಿ ಪರಿಣಿತಿಯನ್ನೂ ಹೊಂದಿರುತ್ತಾರೆ. ಇಂತಹ ಶಿಕ್ಷಕರುಗಳು ಇಂದು ತಾವೇ ಸ್ಪರ್ಧಿಗಳಾಗಿ ಭಾಗವಹಿಸುತ್ತಿರುವುದರಿಂದ ಸ್ಪರ್ಧೆಗಳು ಜಿದ್ದಾ ಜಿದ್ದಿನಿಂದ ಕೂಡಿರುವುದರಲ್ಲಿ ಸಂದೇಹವೇ ಇಲ್ಲ. ದೈಹಿಕ ಶಿಕ್ಷಕರುಗಳು ತಮ್ಮ ಶಾಲೆಯ ಮಕ್ಕಳಿಗೂ ಸಹ ಸ್ಪರ್ಧಾತ್ಮಕವಾಗಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಕ್ರೀಡಾ ಸ್ಪೂರ್ತಿ ಬೆಳೆಸಬೇಕು ಎಂದ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಅಂತಾರಾಷ್ಟ್ರೀಯ ಕ್ರೀಡಾಪಟು ನಿತ್ಯಾನಂದ ಶೆಟ್ಟಿ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಡಿಡಿಪಿಐ ಗಣಪತಿ, ಉಡುಪಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಐದು ವಲಯಗಳ ದೈಹಿಕ ಶಿಕ್ಷಣ ಪರಿವೀಕ್ಷಕಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಅನುಷ್ಠಾನಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅಧಿಕಾರಿಗಳು, ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸತೀಶ್ ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ