ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಪಕ್ಷವನ್ನು ಪ್ರಜಾಪ್ರಭುತ್ವದ ಮೌಲ್ಯಗಳ ಆಧಾರದಲ್ಲಿ ಬಲಪಡಿಸಿ, ಜನರೊಂದಿಗೆ ಬೆರೆತು ಕೆಲಸ ಮಾಡುವ ಸಮರ್ಥ ಕಾರ್ಯಕರ್ತರಿಗೆ ಜಿಲ್ಲಾ ಅಧ್ಯಕ್ಷರ ಜವಾಬ್ದಾರಿ ನೀಡಲಾಗುವುದು.
ಕುಂದಗೋಳ:
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸಂಘಟನ್, ಸೃಜನ್, ಅಭಿಯಾನ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬೂತ್, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಇದನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಎಐಸಿಸಿ ವೀಕ್ಷಕ ಸೈಯ್ಯದ್ ಅಜ್ಮತಉಲ್ಲಾ ಹುಸೈನಿ ಹೇಳಿದರು.
ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಘಟನ್, ಸೃಜನ್, ಅಭಿಯಾನ್ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಪಕ್ಷವನ್ನು ಪ್ರಜಾಪ್ರಭುತ್ವದ ಮೌಲ್ಯಗಳ ಆಧಾರದಲ್ಲಿ ಬಲಪಡಿಸಿ, ಜನರೊಂದಿಗೆ ಬೆರೆತು ಕೆಲಸ ಮಾಡುವ ಸಮರ್ಥ ಕಾರ್ಯಕರ್ತರಿಗೆ ಜಿಲ್ಲಾ ಅಧ್ಯಕ್ಷರ ಜವಾಬ್ದಾರಿ ನೀಡಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಶಾಹಿದ್ ಅಹ್ಮದ್ ಮಾತನಾಡಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರ್ಯಕರ್ತರ ಸಂಖ್ಯೆಯೇ ಪಕ್ಷದ ಬಲವನ್ನು ಪ್ರತಿಬಿಂಬಿಸುತ್ತಿದೆ. ಇದೇ ಒಗ್ಗಟ್ಟು ಮುಂದುವರಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಮುಖಂಡ ಅರವಿಂದಪ್ಪ ಕಟಗಿ ಮಾತನಾಡಿ, ಕುಂದಗೋಳ ತಾಲೂಕಿನಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿರುವುದರಿಂದ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಕುಂದಗೋಳಕ್ಕೆ ನೀಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ಎಸ್. ಅಕ್ಕಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ, ಜಿಲ್ಲಾಧ್ಯಕ್ಷರಾದ ಅನೀಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ಮುಖಂಡ ಶಿವಾನಂದ ಬೆಂತೂರ, ಚಂದ್ರಶೇಖರ ಜುಟ್ಟಲ್, ಸತೀಶ ಕೊಬ್ಬಯ್ಯನವರ, ವಿನೋದ ಅಸೂಟಿ, ಸಲೀಂ ಕ್ಯಾಲಕೊಂಡ, ರಮೇಶ ಕೊಪ್ಪದ, ರಾಯಸಾಬ್ ಕಳ್ಳಿಮನಿ, ಬಸವರಾಜ ನಡುವಿನಹಳ್ಳಿ, ಬಾಬುಲಾಲ್ ಮೋಕಾಶಿ ಸೇರಿದಂತೆ ಹಲವರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.