ಉಡುಪಿ: ಮುಂದಿನ ಜನವರಿಯಲ್ಲಿ ಶ್ರೀ ಕೃಷ್ಣಮಠದಲ್ಲಿ ನಡೆಯಲಿರುವ ಶಿರೂರು ಮಠದ ಪರ್ಯಾಯ ಮಹೋತ್ಸವಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆ, ಅಗತ್ಯ ಮೂಲಸೌಕರ್ಯಗಳ ಜೊತೆಗೆ, ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿರೂರು ಮಠದ ಪರ್ಯಾಯ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ರಸ್ತೆಗಳ ದುರಸ್ತಿಯನ್ನು ಗುಣಮಟ್ಟದೊಂದಿಗೆ ಕೈಗೊಳ್ಳಬೇಕು. ದಾರಿದೀಪಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ನಗರದ ಶುಚಿತ್ವ ಕಾಪಾಡಲು ಹೆಚ್ಚು ಪೌರ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಡಿಸಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.ಮಠದ ಆವರಣದಲ್ಲಿ ಜನಜಂಗುಳಿಯಾಗಿ ಜನರ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಅಗತ್ಯವಿರುವಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಬಂದೋಬಸ್ತಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವುದರೊಂದಿಗೆ ಕಂಟ್ರೋಲ್ ರೂಮ್‌ಗಳು ದಿನದ ಇಪ್ಪನಾಲ್ಕು ಗಂಟೆ ಕಾರ್ಯಾಚರಿಸುವಂತೆ ನೋಡಿಕೊಳ್ಳಬೇಕು. ವಾಹನಗಳ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಯಾವುದೇ ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಮಠದ ಆವರಣದಲ್ಲಿ ವೈದ್ಯರು, ಸಿಬ್ಬಂದಿಯನ್ನೊಳಗೊಂಡ ಆರೋಗ್ಯ ಕೇಂದ್ರವನ್ನು ತಾತ್ಕಾಲಿಕವಾಗಿ ತೆರೆದು, ಆಂಬುಲೆನ್ಸ್ ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.ಪರ್ಯಾಯ ಮಹೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಕೆ.ಎಸ್.ಆರ್.ಟಿ.ಸಿ. ಬಸ್‌ಗಳ ಸೌಲಭ್ಯವನ್ನು ಕಲ್ಪಿಸಬೇಕು ಎಂದ ಅವರು, ಸ್ಥಳೀಯ ಪ್ರವಾಸಿ ತಾಣಗಳ ಭೇಟಿಗೆ ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ವ್ಯವಸ್ಥೆ ಮಾಡಬೇಕು ಎಂದರು.ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು. ಅಗ್ನಿಶಾಮಕ ಹೆಚ್ಚುವರಿ ವಾಹನಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.ಪರ್ಯಾಯ ಮತ್ತು ಪುರ ಪ್ರವೇಶ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವವನ್ನು ನಾಡ ಹಬ್ಬದ ರೀತಿಯಲ್ಲಿ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಶಿರೂರು ಮಠದ ದಿವಾನರದ ಡಾ. ಉದಯಕುಮಾರ್ ಸರಳತ್ತಾಯ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರ್ಯಾಯ ಸ್ವಾಗತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.