- ಜನ ಗುಳೆ ಹೋದರೇ ಸಂಬಂಧಿಸಿದ ಅಧಿಕಾರಿಗಳೇ ಹೊಣೆ: ಸಚಿವ ಬಸವಂತಪ್ಪ ಖಡಕ್ ಸೂಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ತಾಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ವಿಬಿ- ಜಿ ರಾಮ್ ಜಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ನಾಲ್ಕು ತಿಂಗಳ ಬಾಕಿ ಕೂಲಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೂಲಿ ಕಾರ್ಮಿಕರು 4 ತಿಂಗಳಿನಿಂದ ಕೂಲಿ ಹಣ ಬಿಡುಗಡೆ ಆಗದಿರುವ ಬಗ್ಗೆ ಸಚಿವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಕಿ ಹಣ ಪಾವತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಈ ಬಾರಿ ಬರಗಾಲದ ಹಿನ್ನೆಲೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶಗಳ ಕೊರತೆಯಿಂದ ಜನರು ಕೆಲಸ ಅರಸಿ ಬೇರೆಡೆಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದ್ದು, ದುಡಿದ ಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಹಣ ಪಾವತಿಸದಿದ್ದರೆ ಅವರು ಕುಟುಂಬ ನಿರ್ವಹಣೆ ಮಾಡುವುದು ಹೇಗೆ?. ಕೂಲಿ ಹಣ ಪಾವತಿಯಲ್ಲಿ ವಿಳಂಬವಾಗಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಗ್ರಾಮೀಣ ಭಾಗದ ಬಡ ಕುಟುಂಬಗಳು ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಆಹಾರ, ಮಕ್ಕಳ ಶಿಕ್ಷಣ, ಔಷಧೋಪಚಾರ ಸೇರಿದಂತೆ ದೈನಂದಿನ ಅಗತ್ಯಗಳಿಗೆ ಅವಲಂಬಿಸಿವೆ. ಹೀಗಾಗಿ, ಹಣ ಪಾವತಿಯಲ್ಲಿ ವಿಳಂಬ ಆಗುವುದರಿಂದ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ತೊಂದರೆ ಆಗುತ್ತದೆ. ಅಧಿಕಾರಿಗಳು ಈ ಸಮಸ್ಯೆ ನಿರ್ಲಕ್ಷಿಸದೇ, ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಚಿವರು ತಿಳಿಸಿದರು.
ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿರುವ ವಿಬಿ-ಜಿ ರಾಮ್ ಜಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ, ಕಾಮಗಾರಿಗಳ ಪ್ರಗತಿ ಹಾಗೂ ಕೂಲಿ ಪಾವತಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶಿಸಿದರು.
(ಕೋಟ್)
- ಕೆ.ಎಸ್. ಬಸವಂತಪ್ಪ, ಸಚಿವ.
-24ಕೆಡಿವಿಜಿ39:
ದಾವಣಗೆರೆ ತಾ. ಹೆಮ್ಮನಬೇತೂರು ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಬಾಕಿ ಕೂಲಿ ಹಣ ಬಿಡುಗಡೆ ಮಾಡುವಂತೆ ಸಚಿವ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.