ಕನ್ನಡಪ್ರಭ ವಾರ್ತೆ ಗುಡಿಬಂಡೆ
ಜನರು ತಮ್ಮ ಸಮಸ್ಯೆಗಳನ್ನು ತಿಳಿಸಲು ಮುಂದಾದಾಗ ಅವನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲೇ ಸರ್ಕಾರದ ವತಿಯಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದರೆ ಜನತೆ ಇದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಶಾಸಕ ಸುಬ್ಬಾರೆಡ್ಡಿ ಬೇಸರ ವ್ಯಕ್ತಪಡಿಸಿದರು.ತಾಲೂಕಿನ ಎಲ್ಲೋಡು ಗ್ರಾಪಂ ವ್ಯಾಪ್ತಿಯ ಎಲ್ಲೋಡು ಆದಿನಾರಾಯಣಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯತಿ ಸಹಯೋಗದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಅವರು ಮಾತನಾಡಿದರು.
ಕಾಲಮಿತಿಯೊಳಗೆ ಅರ್ಜಿ ಇತ್ಯರ್ಥಸಾರ್ವಜನಿಕರ ಕೊಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ರೀತಿಯ ಸೌಲಭ್ಯಗಳಿಗಾಗಿ ಹಾಗೂ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅರ್ಜಿ ಸಲ್ಲಿಸಿದರೆ ಕಾಲಮಿತಿಯೊಳಗೆ ಇತ್ಯರ್ಥ ಪಡಿಸಲಾಗುವುದು ಎಂದರು.
ಸಮಸ್ಯೆ ತಿಳಿಸದಿದ್ದರೆ ಹೇಗೆ?ಜನರು ತಮ್ಮ ಸಮಸ್ಯೆಗಳನ್ನು ತಿಳಿಸದೇ ಇದ್ದರೇ ಹೇಗೆ ಸಮಸ್ಯೆ ಬಗೆಹರಿಯುತ್ತದೆ. ಆದ್ದರಿಂದ ನ್ಯಾಯಸಮ್ಮತ ಹಾಗೂ ಕಾನೂನಾತ್ಮಕವಾದ ಸಮಸ್ಯೆಗಳನ್ನು ಇಂತಹ ಜನಸ್ಪಂದನಾ ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ. ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಈ ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಭೂಮಿ ಮಂಜೂರು ಮಾಡುವಂತೆ, ನಿವೇಶನ ಸೇರಿದಂತೆ ಇನ್ನಿತರೇ ಸೌಲಭ್ಯ, ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಗಳು, ಬಸ್ ವ್ಯವವಸ್ಥೆ ಕಲ್ಪಿಸುವಂತೆ ಹಾಗೂ ಇನ್ನಿತರೇ ಇಲಾಖೆಗಳಲ್ಲಿ ಸೌಲಭ್ಯಕ್ಕಾಗಿ ಒಟ್ಟು 148 ಕ್ಕೂ ಹೆಚ್ಚಿನ ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು. ಸಲ್ಲಿಕೆಯಾದ ಅರ್ಜಿಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.ಆರೋಗ್ಯ ತಪಾಸಣಾ ಶಿಬಿರ
ಕಾರ್ಯಕ್ರಮದಲ್ಲಿ ಉಚಿತ ಅರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಆಯ್ಕೆಯಾದ ರೋಗಿಗಳನ್ನು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಉಚಿತವಾಗಿ ಮಾಡಿಸಲಾಗುವುದು. ಸಭೆಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ, ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಗಳನ್ನು ವಿತರಣೆ ಮಾಡಲಾಯಿತು. ಉಳಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಕಲ್ಪಿಸುವ ವಿವಿಧ ಯೋಜನೆಗಳ ಅಡಿಯಲ್ಲಿ ಆಯ್ಕೆಯಾದ ತಾಲೂಕಿನ ಫಲಾನುಭವಿಗಳಗೆ ಒಂದೇ ಸೂರಿನಡಿ ಹಕ್ಕು ಪತ್ರಗಳನ್ನು ವಿತರಿಸಿ, ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮನಿಷಾ, ತಾಪಂ ಇಒ ಹೇಮಾವತಿ, ಗುಡಿಬಂಡೆ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನೀರಿಕ್ಷಕ ನಯಾಜ್ ಬೇಗ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ನೂರಾರು ಸಾರ್ವಜನಿಕರು ಸೇರಿದಂತೆ ಇತರರು ಹಾಜರಿದ್ದರು.