- ಬಿಜೆಪಿ ನೇತೃತ್ವ ಪ್ರತಿಭಟನೆಯಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ್ ಆರೋಪ - - - ಕನ್ನಡಪ್ರಭ ವಾರ್ತೆ ಹರಿಹರ
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಹರಿಹರ ತಾಲೂಕು ಬಿಜೆಪಿ ವತಿಯಿಂದ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಶಾಸಕ ಬಿ.ಪಿ. ಹರೀಶ್ ನೇತೃತ್ವದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕೆಲ ಸಮಯ ರಸ್ತೆ ತಡೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೂಡಲೇ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ಆದೇಶ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಶಾಸಕ ಬಿ.ಪಿ.ಹರೀಶ್ ಮಾತನಾಡಿ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದ್ದು, ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ, ಗ್ಯಾರಂಟಿಗಳಿಗೆ ಹಣ ಜೋಡಿಸಲು ಬೆಲೆ ಏರಿಕೆಯಂತಹ ಕೃತ್ಯ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರದ ಈ ಕ್ರಮದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಬೆಲೆ ಏರಿಕೆ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆರುತ್ತದೆ. ಜನಸಾಮಾನ್ಯರು ಜೀವನ ಮಾಡುವುದೇ ಕಷ್ಟವಾಗಿದೆ. ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು. ಇಲ್ಲದ್ದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿಗೆ ಮೀಸಲಿಟ್ಟಿರುವ ಅನುದಾನವನ್ನು ಅನ್ನ ಕಾರ್ಯಗಳಿಗೆ ರಾಜ್ಯ ಸರ್ಕಾರ ಬಳಸುವ ಮೂಲಕ ಆ ವರ್ಗದ ಶ್ರೇಯೋಭಿವೃದ್ಧಿಗೆ ಧಕ್ಕೆ ತಂದಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರಿಂದ ಸೇಡು:
ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹನಗವಾಡಿ ವೀರೇಶ್ ಮಾತನಾಡಿ, ಗ್ಯಾರಂಟಿಗಳ ಅಲೆಯಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿಗಳನ್ನೇ ನಂಬಿ ಲೋಕಸಭಾ ಚುನಾವಣೆಗೆ ಹೋಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ. ಇದರಿಂದ ಬೇಸರಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವ ಮೂಲಕ ಮತದಾರರ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಆಟೋ ಹನುಮಂತಪ್ಪ, ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣೇಶ್ ಐರಣಿ, ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ಭೂತೆ, ವೀರೇಶ ಆದಾಪೂರ್, ಮುಖಂಡರಾದ ವಾಸು ಚಂದಾಪೂರ, ಸಂತೋಷ ಗುಡಿಮನಿ, ರಾಜೇಶ್ ವರ್ಣೇಕರ್, ಹಳ್ಳದಕೇರಿ ಗಿರೀಶ್, ರವಿ, ಕಾರ್ತಿಕ್, ಸುರೇಶ್ ತೇರದಾಳ, ರಾಜು ಖಿರೋಜಿ, ಗೋಪಿನಾಥ್, ಬೆಣ್ಣೆ ಸಿದ್ದಣ್ಣ, ಮಾರುತಿ ಶೆಟ್ಟಿ, ಜಿ.ಎಂ. ಪ್ರಶಾಂತ್, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
- - - -೨೪ಎಚ್‌ಆರ್‌ಆರ್೧:ಹರಿಹರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪೇಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ರಸ್ತೆ ತಡೆ ನಡೆಸಿ, ಪ್ರತಿಭಟಿಸಲಾಯಿತು. ಶಾಸಕ ಬಿ.ಪಿ.ಹರೀಶ್, ಮುಖಂಡರಾದ ಎಸ್.ಎಂ.ವೀರೇಶ್ ಹನಗವಾಡಿ, ಚಂದ್ರಶೇಖರ್ ಪೂಜಾರ್, ಅಜಿತ್ ಸಾವಂತ್ ಇದ್ದರು.