ಕನ್ನಡಪ್ರಭ ವಾರ್ತೆ ಮೈಸೂರು
ಜಿಪಂ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಬಹಳ ಸುಲಭವಾಗಿ ನಡೆಯುತ್ತದೆ ಎಂದರು.
ಜನರ ಬೇಡಿಕೆ ಬಹಳಷ್ಟು ಇರುತ್ತದೆ. ಜನರಿಂದ ಮಾಹಿತಿ ಪಡೆದು ಯೋಜನೆ ರೂಪಿಸುವುದು ಕಷ್ಟಕರವಾಗಿದೆ. ಆದ್ದರಿಂದ ಯೋಜನೆ ರೂಪಿಸುವಾಗ ಯಾವ ವಿಷಯಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು. ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಯಾವ ಫಲಾನುಭವಿಗೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು ಎಂದರು.ಜನರ ಪಾಲ್ಗೊಳ್ಳುವಿಕೆಯಿಂದ ಜನೋಪಯೋಗಿ ಕೆಲಸ ಮಾಡಬಹುದು ಎಂಬ ಆಶಯದೊಂದಿಗೆ ಸಭೆಗಳನ್ನು ನಡೆಸುತ್ತಿದ್ದು, ಜಿಲ್ಲಾ ಯೋಜನಾ ವಿವರಗಳನ್ನು ಆಯವ್ಯಯಕ್ಕೂ ಮುನ್ನ ಮುಖ್ಯಮಂತ್ರಿಗಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಗ್ರಾಮ ಹಾಗೂ ವಾಡ್೯ ಸಭೆಗಳಿಂದ ಜನರ ಅಭಿಪ್ರಾಯ ಪಡೆದು ತಾಲೂಕು ಮಟ್ಟದ ಯೋಜನೆ ರೂಪಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕ್ರೋಢಿಕರಿಸಿ ವರದಿ ನೀಡಿ. ಜಿಲ್ಲಾ ಯೋಜನಾ ಸಮಿತಿಗಳ ಕಾರ್ಯನಿರ್ವಹಣೆ ಪರಿಣಾಮಕಾರಿಯಾಗಿ ನಡೆದರೆ ಮುಂದಿನ ದಿನಗಳಲ್ಲಿ ಬಹಳಷ್ಟು ಜನರ ಕಷ್ಟ ಪರಿಹಾರವಾಗುತ್ತದೆ ಎಂದರು.
ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಮಾತನಾಡಿ, ಜಿಲ್ಲೆಯ ಪ್ರಗತಿಪರ ಯೋಜನೆಗಳನ್ನು ರೂಪಿಸುವ ಸಲುವಾಗಿ ಈಗಾಗಲೇ ತರಬೇತಿಗಳನ್ನು ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಯೋಜನೆ ರೂಪಿಸುವುದು ಬಾಕಿ ಇದ್ದು, ಶೀಘ್ರವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ, ಮೈಸೂರು ಜಿಪಂ ಸಿಇಒ ಯುಕೇಶ್ ಕುಮಾರ್, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಪಂ ಸಿಇಒಗಳು ತಮ್ಮ ಜಿಲ್ಲೆಗಳ ಯೋಜನೆಯನ್ನು ವಿವರಿಸಿದರು.
ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.