ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಎಡಿಸಿ ಶಿವಾನಂದ ಸಲಹೆ

KannadaprabhaNewsNetwork | Published : Nov 22, 2024 1:18 AM

ಸಾರಾಂಶ

ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ವಿಕಲಚೇತನರು ಕೀಳರಮೆ ಬಿಟ್ಟು ತಮ್ಮ ಸವಾಲುಗಳನ್ನು ಸ್ವೀಕರಿಸಿ, ಸಾಮರ್ಥ್ಯವನ್ನು ಅರಿತು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಲಹೆ ನೀಡಿದರು.

ಸ್ಥಳೀಯ ಮಹಾತ್ಮ ಗಾಂದಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸಂಘ, ಸ್ವಯಂ ಸೇವಾ ಸಂಸ್ಥೆಗಳು, ಒಕ್ಕೂಟಗಳು ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-2024ರ ಅಂಗವಾಗಿ ಹಮ್ಮಿಕೊಂಡಿದ್ದ ವಿಕಲಚೇತನರಿಗಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಗುರುವಾರ ಮಾತನಾಡಿದರು. ಪ್ರತಿಯೊಬ್ಬರಲ್ಲಿಯೂ ಅಗಾಧ ಶಕ್ತಿ, ಸಾಮರ್ಥ್ಯ, ಜ್ಞಾನ, ಕೌಶಲ್ಯ ಅಡಗಿರುತ್ತದೆ. ವಿಕಲ ಚೇತನರು ಸಕರಾತ್ಮಕವಾಗಿ ಆಲೋಚನೆ ಮಾಡಬೇಕು. ಸವಾಲುಗಳನ್ನು ಸ್ವೀಕರಿಸಿ ಮುನ್ನಡೆಯಬೇಕು. ಉನ್ನತ ಶಿಕ್ಷಣವನ್ನು ಪಡೆದು ಅಭಿವೃದ್ಧಿಯಾಗಬೇಕು ಎಂದರು.

ವಿಕಲಚೇತನರು ವಿಶೇಷಚೇತನರು. ನಿಮ್ಮಲ್ಲಿ ವಿಶೇಷ ಸಾಮರ್ಥ್ಯ, ಜ್ಞಾನ, ಆಲೋಚನೆಯಿಂದ ಅಭಿವೃದ್ಧಿಯಾಗಬೇಕು. ವಿಕಲಚೇತನರ ಶ್ರೇಯೋಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ವಿಕಲಚೇತನರಿಗಾಗಿ ಗುಂಡು ಎಸೆತ, 100 ಮೀ. ಓಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ವ್ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ವಿವಿಧ ಬಗೆಯ ವಿಕಲಚೇತನರು, ಸ್ವಯಂ ಸೇವಾ ಸಂಸ್ಥೆಗಳು, ಸಂಘಗಳು, ಒಕ್ಕೂಟಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Share this article