ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ. ಕಾಂಗ್ರೆಸ್ ನ ಈ ಮಹಿಳಾ ವಿರೋಧಿ ನೀತಿಗೆ ಜನತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಹೇಳಿದರು.ಅವರು ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿಂದೆ ಮಹಿಳೆಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು. ಪರೀಕ್ಷೆಯ ನೆಪದಲ್ಲಿ ವಿದ್ಯಾರ್ಥಿನಿಯರ ಮಾಂಗಲ್ಯ ಮತ್ತು ಕಾಲುಂಗುರ ತೆಗೆಸುವ ಮೂಲಕ ಮತ್ತೇ ಮಹಿಳೆಯರನ್ನು ಅವಮಾನಿಸಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿಯೇ ನಡೆದಿದೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ ಎಂದರು.ಈ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸುಪ್ರಿಯಾ ಶ್ರೀನಾತೆ ಅವರು ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರ ಬಗ್ಗೆ ಅತ್ಯಂತ ಕೀಳು ಮಟ್ಟದ ಭಾಷೆಯನ್ನು ಬಳಸಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಮಹಿಳೆ ಅಡುಗೆ ಮನೆಗೆ ಲಾಯಕ್ ಎಂದು ಹೀಯಾಳಿಸಿದ್ದಾರೆ.
ಅವರ ಪಕ್ಷದ ಇಂದಿರಾ ಗಾಂಧಿ ದೇಶದ ಪ್ರಧಾನಿ ಆಗಿದ್ದರು. ಆ ಪಕ್ಷದ ನಾಯಕಿಯರಾದ ಪ್ರಿಯಾಂಕ ವಾದ್ರಾ ಮತ್ತು ಸೋನಿಯಾ ಗಾಂಧಿ ಅವರೂ ಮಹಿಳೆಯರೇ ಆಗಿದ್ದಾರೆ. ಹಾಗಿರುವಾಗ ಮತ್ತೊಂದು ಪಕ್ಷದ ಅಭ್ಯರ್ಥಿಯ ಬಗ್ಗೆ ಅಗೌರವದ ಮಾತನಾಡುವುದು ಖಂಡನೀಯ ಎಂದವರು ಅಸಮಾಧಾನ ವ್ಯಕ್ತಪಡಿಸಿದರು.ಈ ಎಲ್ಲ ಘಟನೆಗಳನ್ನು ದೇಶದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.