ಪರೀಕ್ಷಾ ಅಕ್ರಮ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ನಳಿನ್ ಅತುಲ್

KannadaprabhaNewsNetwork |  
Published : Mar 19, 2024, 12:47 AM ISTUpdated : Mar 19, 2024, 12:48 AM IST
18ಕೆಪಿಎಲ್21 ಎಸ್ ಎಸ್ ಎಲ್ಸಿ  ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಡಿಸಿ ನಳಿನ್ ಅತುಲ್ ಅವರು ವಹಿಸಿದ್ದರು. | Kannada Prabha

ಸಾರಾಂಶ

ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ: ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆಕನ್ನಡಪ್ರಭ ವಾರ್ತೆ ಕೊಪ್ಪಳ

ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ 2024ನೇ ಮಾರ್ಚ್, ಏಪ್ರಿಲ್ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಕುರಿತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾ. 25ರಿಂದ ಏ. 6ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಲ್ಲಿರಿಸಿ. ಪರೀಕ್ಷಾ ದಿನದಂದು ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣ ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಇನ್ನುಳಿದವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆ ಇದ್ದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಂಬಂಧಿಸಿದ ನಗರಸಭೆ ಅಥವಾ ಗ್ರಾಪಂ ಅಧಿಕಾರಿಗಳನ್ನು ಮುಂಚಿತವಾಗಿ ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು. ಇದಲ್ಲದೇ ಶೌಚಾಲಯಗಳ ವ್ಯವಸ್ಥೆ ಸಹ ಕಲ್ಪಿಸಬೇಕು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಯಾವುದೇ ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ಸಮಯದಲ್ಲಿ ಪಶ್ನೆ ಪತ್ರಿಕೆ ಸೋರಿಕೆ ಮಾಡುವುದು ಕಂಡುಬಂದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ ಕಂಡಿಕೆ 115ರ ದಂಡ ಸಂಹಿತೆ ಪರೀಕ್ಷಾ ನಿಯಮ ಉಲ್ಲಂಘನೆ ಸೆಕ್ಷನ್ 24ಎ ಪ್ರಕಾರ ತಪ್ಪಿತಸ್ಥರಿಗೆ 3 ರಿಂದ 5 ವರ್ಷಗಳ ವರೆಗೆ ಜೈಲುವಾಸ ಹಾಗೂ 5 ಲಕ್ಷದವರೆಗೆ ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದ್ದು, ಶಿಕ್ಷಕರು, ಪರೀಕ್ಷಾ ನಿಯೋಜಿತ ಸಿಬ್ಬಂದಿಗಳು ಜವಾಬ್ದಾರಿ ಹಾಗೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಮಾತನಾಡಿ, ಪರೀಕ್ಷೆ ಬರೆಯುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರಥಮ ಚಿಕಿತ್ಸೆಗಾಗಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಕಿಟ್ ಮತ್ತು ಆರೋಗ್ಯ ಸಹಾಯಕರನ್ನು ನಿಯೋಜಿಸಿ. ಪರೀಕ್ಷೆ ಬರೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮತ್ತು ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರ ಪರಿಶೀಲಿಸಬೇಕು. ಸುಗಮವಾಗಿ ಪರೀಕ್ಷೆ ನಡೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಮಾತನಾಡಿ, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಒಟ್ಟು 25,481 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಗಂಗಾವತಿ ತಾಲೂಕಿನ 23, ಕೊಪ್ಪಳದ 23, ಕುಷ್ಟಗಿಯ 15 ಹಾಗೂ ಯಲಬುರ್ಗಾದ 14 ಸೇರಿದಂತೆ ಒಟ್ಟು 75 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಎಸ್‌ಪಿ ಹೇಮಂತ್‌ಕುಮಾರ ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, 75 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ತಾಲೂಕು ನೋಡಲ್ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಡುಪ್ರಾಣಿಗಳ ಸಂತಾನಶಕ್ತಿ ಹರಣಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ: ಖಂಡ್ರೆ
ಸರ್‌ ಪರಿಶೀಲನೆಗೆ.... ಸ್ವಾಮಿಜಿ ಕೇಸ್ ಮಹಿಳೆಗಾಗಿ ಹುಡುಕಾಟ