ಬಳ್ಳಾರಿ: ಬರುವ ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಲೋಕಸಭೆ ಮತ ಕ್ಷೇತ್ರವಾದ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ ಬಳ್ಳಾರಿ ಜಿಲ್ಲೆಯ 4 ಕ್ಷೇತ್ರ, ವಿಜಯನಗರ ಜಿಲ್ಲೆಯ 4 ಕ್ಷೇತ್ರ ಒಳಗೊಂಡಿದೆ. ಸಿರುಗುಪ್ಪ ಕ್ಷೇತ್ರ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದೆ. ಚುನಾವಣೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆ ಈಗಿನಿಂದಲೇ ಮಾಡಿಕೊಳ್ಳಬೇಕು. ಚುನಾವಣಾ ಕಾರ್ಯವನ್ನು ತಂಡವಾಗಿ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಬೇಕು ಎಂದರು.
ಈಗಾಗಲೇ ಚುನಾವಣಾ ಕಾರ್ಯಕ್ಕೆ ನೇಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ ನೀಡಿ ಸಜ್ಜುಗೊಳಿಸಬೇಕು ಎಂದರು.ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚುನಾವಣೆ ನಡೆಸಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪ್ರತಿ ನೋಡಲ್ ಅಧಿಕಾರಿ ತನ್ನ ವಿಭಾಗದ ಕಾರ್ಯ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ ನೀಡಿ, ತನ್ನ ತಂಡವನ್ನು ಸುಸಜ್ಜಿತಗೊಳಿಸುವುದು ಅವರ ಕರ್ತವ್ಯವಾಗಿದೆ ಎಂದರು.
ಸ್ಟ್ರಾಂಗ್ ರೂಂಗಳ ಪರಿಶೀಲನೆ ಕೈಗೊಳ್ಳಬೇಕು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕುರಿತು ತರಬೇತಿ ನೀಡಬೇಕು ಎಂದರು.
ಆದಾಯ ತೆರಿಗೆ ಇಲಾಖೆ ಅಧಿಕಾರಿ ನಿಶಾಂತ್ ಮಾತನಾಡಿದರು. ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಎನ್. ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ನೋಡೆಲ್ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.