ಅಚ್ಚುಕಟ್ಟಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸಿ: ಎಡಿಸಿ

KannadaprabhaNewsNetwork | Published : Jul 31, 2024 1:00 AM

ಸಾರಾಂಶ

ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು, ಸಿಬ್ಬಂದಿ ಜವಾಬ್ದಾರಿಯಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-3: ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚನೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಆಗಸ್ಟ್ 2 ರಿಂದ 9 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3 ರಲ್ಲಿ ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು, ಸಿಬ್ಬಂದಿ ಜವಾಬ್ದಾರಿಯಾಗಿದ್ದು, ಅಚ್ಚುಕಟ್ಟಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು.

ಜಿಲ್ಲೆಯಲ್ಲಿ ಆ. 2ರಿಂದ 9ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3 ರ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳ, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಇತರೆ ಪರೀಕ್ಷಾ ನಿಯೋಜಿತ ಸಿಬ್ಬಂದಿ ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಕಾಲಮಿತಿಯಲ್ಲಿ ನಿಯಮಾನುಸಾರ ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡು, ಸುಗಮ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು. ಈಗಾಗಲೇ ನೀಡಿರುವ ನಾಮಿನಲ್ ರೋಲ್‌ನಲ್ಲಿ ಇರುವಂತೆ ಪರೀಕ್ಷಾ ಕೇಂದ್ರದಲ್ಲಿ ಆಸನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂದು ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳು ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವಂತಿಲ್ಲ. ಈ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಎಚ್ಚರಿಕೆಯಿಂದ ತಪಾಸಣೆಗೆ ಕ್ರಮ ಕೈಗೊಂಡು, ಅಭ್ಯರ್ಥಿಗಳಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರು, ಶೌಚಾಲಯ, ಸೂಕ್ತ ಗಾಳಿ ಬೆಳಕು, ಆಸನದ ವ್ಯವಸ್ಥೆ ಮಾಡಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಮಾತನಾಡಿ, ಜಿಲ್ಲೆಯಲ್ಲಿ ಆ. 2ರಿಂದ 9ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3ರಲ್ಲಿ ಜಿಲ್ಲೆಯಾದ್ಯಂತ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಯಲಬುರ್ಗಾ ತಾಲೂಕಿನ 662, ಕುಷ್ಟಗಿ ತಾಲೂಕಿನ 720, ಕೊಪ್ಪಳ ತಾಲೂಕಿನ 863 ಹಾಗೂ ಗಂಗಾವತಿ 1,204 ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 3,449 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಮಂಡಳಿಯ ಮಾರ್ಗಸೂಚಿಯಂತೆ ಸುಗಮ ಪರೀಕ್ಷೆಗೆ ಎಲ್ಲ ರೀತಿಯ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪರೀಕ್ಷಾ ನೋಡಲ್ ಅಧಿಕಾರಿ ಶರಣಬಸವಗೌಡ, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಪರೀಕ್ಷಾ ನಿಯೋಜಿತ ಸಿಬ್ಬಂದಿ, ಖಜಾನೆ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share this article