ಸಾರ್ವಜನಿಕರು ಜಿಲ್ಲೆಯ ವಿವಿಧ ತಾಲೂಕುಗಳಿಂದ ದೂರದೂರುಗಳಿಂದ ಕೆಲಸ ಕಾರ್ಯಗಳಿಗೆ ಅರ್ಜಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುತ್ತಾರೆ. ಅಂತಹವರು ಇಡೀ ದಿನ ಅಧಿಕಾರಿಗಳ ಭೇಟಿಗಾಗಿ ಕಾಯುವಂತಾಗಬಾರದು. ಅವರ ಸಮಯ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಕೌಂಟರ್ ಒಂದನ್ನು ಸ್ಥಾಪಿಸಲಾಗುವುದು.
ಚಿತ್ರದುರ್ಗ: ಸಾರ್ವಜನಿಕರು ಜಿಲ್ಲೆಯ ವಿವಿಧ ತಾಲೂಕುಗಳಿಂದ ದೂರದೂರುಗಳಿಂದ ಕೆಲಸ ಕಾರ್ಯಗಳಿಗೆ ಅರ್ಜಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುತ್ತಾರೆ. ಅಂತಹವರು ಇಡೀ ದಿನ ಅಧಿಕಾರಿಗಳ ಭೇಟಿಗಾಗಿ ಕಾಯುವಂತಾಗಬಾರದು. ಅವರ ಸಮಯ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಕೌಂಟರ್ ಒಂದನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರೊಂದಿಗೆ ಪರಿಚಯಾತ್ಮಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪಡೆದು, ಅವರಿಗೆ ಸ್ವೀಕೃತಿ ನೀಡಲಾಗುವುದು. ಅಲ್ಲದೆ ಅಂತಹ ಅರ್ಜಿಗಳನ್ನು ಗಣಕೀಕರಣಗೊಳಿಸಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡಲು, ಅರ್ಜಿಗಳಿಗೆ ಸ್ಪಂದಿಸಲು ವಿಶೇಷ ಆದ್ಯತೆ ನೀಡಲಾಗುವುದು. ಅರ್ಜಿಗಳ ವಿಲೇವಾರಿ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಪರಿಶೀಲನೆ ಮಾಡಲಾಗುವುದು. ಜಿಲ್ಲಾಧಿಕಾರಿಯಾಗಿ ಕಚೇರಿಗೆ ಮಾತ್ರ ಸೀಮಿತವಾಗದೇ, ಗ್ರಾಮಗಳಿಗೆ ತೆರಳಿ, ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯಲು ಬಯಸುತ್ತೇನೆ. ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಒದಗಿಸಲು ಶ್ರಮಿಸುವ ಮೂಲಕ ಜನಸ್ನೇಹಿ ಆಡಳಿತ ನೀಡುವುದಾಗಿ ಭರವಸೆ ನೀಡಿದರು.
ಈ ಮೊದಲು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತ, ಕೆಎಸ್‍ಆರ್‍ಟಿಸಿ ನಿರ್ದೇಶಕ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಹೀಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಇದೀಗ ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದೇನೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ ಅನುಭವವಿದೆ, ಹೀಗಾಗಿ ಇಲ್ಲಿನ ಸಮಸ್ಯೆಗಳ ಬಗ್ಗೆಯೂ ಮಾಹಿತಿ ಇದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.